ಬೆಂಗಳೂರು, ನ.16(Daijiworld News/SS): ಮುಖ್ಯಮಂತ್ರಿ ಯಡಿಯೂರಪ್ಪ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ಈ ಬಗ್ಗೆ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಸಚಿವರನ್ನಾಗಿ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಅನರ್ಹ ಶಾಸಕರನ್ನು ಸಚಿವರನ್ನಾಗಿಸುವ ಹಾಗೂ ಶಂಕರ್ ಅವರನ್ನು ವಿಧಾನಪರಿಷತ್ ಸದಸ್ಯರಾಗಿಸುವ ಭರವಸೆ ನೀಡಿರುವುದು ಸ್ಪಷ್ಟ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನಾಯಕರು, ವಿಧಾನಸೌಧ ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ ಕ್ಷೇತ್ರಕ್ಕೆ ಸರವಣ ಅವರನ್ನು ಆಯ್ಕೆ ಮಾಡಿದ್ದೇವೆ. ಅವರ ತಮಿಳು ಭಾಷಿಕರಾಗಿದ್ದರಿಂದ ಅವರಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದ್ದಾರೆ. ನಿಮ್ಮದೇ ಭಾಷಿಕನಿಗೆ ಟಿಕೆಟ್ ಕೊಟ್ಟಿದ್ದೇವೆ, ಅವರನ್ನೂ ಗೆಲ್ಲಿಸಿಕೊಡಿ ಎಂದು ತಮಿಳು ಭಾಷಿಕರ ಓಲೈಕೆ ಮಾಡಲಾಗಿದೆ. ಇದೂ ಸಹ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ವಿರುದ್ಧ ದೂರು ನೀಡಲಾಗಿದೆ ಎಂದು ತಿಳಿಸಿದರು.