ಬೆಂಗಳೂರು, ನ.19(Daijiworld News/SS): ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಎಲ್ಲರೂ ದುಡಿಯಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಭಿನ್ನಾಭಿಪ್ರಾಯಕ್ಕೆ ಆಸ್ಪದವಿಲ್ಲದಂತೆ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ. ಪಕ್ಷದ ಗೆಲುವಿಗಾಗಿ ಎಲ್ಲರೂ ದುಡಿಯಬೇಕು ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಅವರು, ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಕಾಂಗ್ರೆಸ್'ನ ಕೆಲ ಮುಖಂಡರು ಸಂಚು ನಡೆಸಿದ್ದರು. ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಈ ಮುಖಂಡರೇ ಎಂದು ಪರೋಕ್ಷವಾಗಿ ದೂರಿದರು.
ಸರ್ಕಾರ ಪತನಗೊಳಿಸಬೇಕು ಎಂದು ಮೊದಲೇ ಕಾಂಗ್ರೆಸ್ ಪಕ್ಷದವರು ನಿರ್ಧರಿಸಿದ್ದರು. ಇದಕ್ಕಾಗಿ ತಮ್ಮ ಶಾಸಕರನ್ನು ಮುಂಬೈಗೆ ಅವರೇ ಕಳುಹಿಸಿದ್ದರು. ಆದರೆ ಕಾಂಗ್ರೆಸ್ ಈ ಬಗ್ಗೆ ಮಾತನಾಡುವುದೇ ಇಲ್ಲ. ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಕೆಲ ಮುಖಂಡರು ಕಾರಣ ಎಂದು ದೂರಿದರು.