ಬೆಂಗಳೂರು, ನ.19(Daijiworld News/SS): 2025ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕ ಶಕ್ತಿಯಾಗಿ ರಾಜ್ಯ ಬೆಳೆಯಬೇಕೆಂಬ ಗುರಿ ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ಬೆಂಗಳೂರು ತಂತ್ರಜ್ಞಾನ ಶೃಂಗ –2019’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜ್ಞಾನದ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಕೆಟಿಡಿಬಿ) ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈ ಮಂಡಳಿ ತಂತ್ರಜ್ಞಾನ ವಲಯದ ಹೂಡಿಕೆಯ ಪ್ರೋತ್ಸಾಹ, ಉದ್ಯಮಗಳ ಅಭಿವೃದ್ಧಿ ಮತ್ತು ಮಾನವ ಶಕ್ತಿಯ ಅಭಿವೃದ್ಧಿಗೆ ಕಾರಣವಾಗಲಿದೆ ಮತ್ತು ಅತ್ಯುತ್ತಮ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಮುಂಚೂಣಿಯ ಹಬ್'ಗಳಲ್ಲಿ ರಾಜ್ಯಕ್ಕೆ ಸ್ಥಾನ ಒದಗಿಸಿಕೊಡಲಿದೆ ಎಂದು ಹೇಳಿದರು.
ವಿಜ್ಞಾನ ತಂತ್ರಜ್ಞಾನ ಕ್ಷೇತ್ರ ರಾಜ್ಯದ ಆರ್ಥಿಕ ಬೆಳವಣಿಗೆಗೆ ಉತ್ತಮ ಕೊಡುಗೆ ನೀಡುತ್ತಿದೆ. ಸೇವಾ ವಲಯದಿಂದ ಉತ್ಪನ್ನಗಳ ಅಭಿವೃದ್ದಿ ಬದಲಾವಣೆಯಾಗುತ್ತಿದೆ. ಇತ್ತೀಚಿನ ಜಾಗತಿಕ ವರದಿಯ ಅನುಸಾರ ಬೆಂಗಳೂರು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕವಾಗಿ ಹನ್ನೊಂದನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಸಾಫ್ಟ್ ವೇರ್ ಟೆಕ್ಲಾಲಜಿ ಪಾರ್ಕ್ ಆಫ್ ಇಂಡಿಯಾ ವತಿಯಿಂದ ಈ ಸಮ್ಮೇಳನ ಆಯೋಜಿಸಲಾಗಿದೆ. ಇದು ಜಾಗತಿಕ ವೇದಿಕೆಯಾಗಿದ್ದು ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದರು.