ನವದೆಹಲಿ, ನ 19 (DaijiworldNews/SM): ಆಡಳಿತ ಪಕ್ಷಗಳ ಕೆಲವೊಂದು ನಿರ್ಧಾರಗಳನ್ನು ವಿರೋಧಿಸಿ ಸದನದಲ್ಲಿ ಕೋಲಾಹಲವುಂಟಾಗುವುದು, ಹಾಗೂ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವುದು ಸಾಮಾನ್ಯ. ಆದರೆ, ಇಂದಿನಿಂದ ಪ್ರತಿಪಕ್ಷಗಳು ಕೇಂದ್ರ ಸರಕಾರದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸುವಂತಿಲ್ಲ. ಒಂದೊಮ್ಮೆ ಹಾಗೆ ಮಾಡಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನವಂಬರ್ 19ರ ಮಂಗಳವಾರದಂದು ಲೋಕಸಭಾ ಕಲಾಪ ಆರಂಭವಾಗುತ್ತಿದ್ದಂತೆ ರೈತರ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಕೇಂದ್ರ ಸರಕಾರದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟನೆಗೆ ಮುಂದಾದವು. ಹಾಗೂ ಮೋದಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗ ತೊಡಗಿದರು. ಈ ಸಂದರ್ಭ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಹಾಗೂ ಇತರೆ ಪ್ರತಿಪಕ್ಷಗಳ ಸದಸ್ಯರಿಗೆ ಸದನದ ಬಾವಿಗೆ ಇಳಿಯದಂತೆ ಸೂಚಿಸಲಾಯಿತು. ಹಾಗೂ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಎಚ್ಚರಿಕೆ ನೀಡಿದರು.
ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ನಿದರ್ಶನಗಳು ಸಾಕಷ್ಟಿವೆ. ಆದರೆ, ಇನ್ನು ಮುಂದೆ ಇದಕ್ಕೆ ಅವಕಾಶವಿಲ್ಲ ಎಂದು ಸ್ಪೀಕರ್ ತಿಳಿಸಿದ್ದಾರೆ. ಒಂದೊಮ್ಮೆ ಪ್ರತಿಭಟನೆಗೆ ಮುಂದಾದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಎಚ್ಚರಿಕೆ ನೀಡಿದ್ದಾರೆ. ಇನ್ನು ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನಾಯಕರು, ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್ ಪಿಜಿ ಭದ್ರತೆ ಹಿಂಪಡೆದ ವಿಚಾರ ಪ್ರಸ್ತಾಪಿಸಿದರು. ಹಾಗೂ ಕೇಂದ್ರ ಸರಕಾರ ಭದ್ರತೆ ವಿಚಾರದಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲವು ಸಮಯ ಸದನದಲ್ಲಿ ಕೋಲಾಹಲ ಉಂಟಾಯಿತು. ಅಲ್ಲದೆ, ಭದ್ರತೆಯ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂಬುವುದಾಗಿ ಕಾಂಗ್ರೇಸ್ ನಾಯಕರು ಅಸಮಾಧಾನ ಹೊರಹಾಕಿದರು.