ನವದೆಹಲಿ, ನ 24(Daijiworld News/MB) : ಮಹಾರಾಷ್ಟ್ರದಲ್ಲಿ ದಿನಬೆಳಗಾಗುವುದರಲ್ಲಿ ಬಿಜೆಪಿ ಸರಕಾರ ರಚನೆ ಮಾಡಲು ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ನಿರ್ಧಾರ ವಿರುದ್ಧ ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.
ನವೆಂಬರ್ 23 ರಂದು ರಾತ್ರಿ ಮೂರು ರಾಜಕೀಯ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಸ್ವೀಕರಿಸಿದ್ದು, ಇಂದು ಬೆಳಿಗ್ಗೆ 11.30ಕ್ಕೆ ವಿಚಾರಣೆ ನಿಗದಿ ಮಾಡಿದೆ.
ನವೆಂಬರ್ 10ರಂದು ಸರ್ಕಾರ ರಚಿಸುವಂತೆ ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿದ್ದರು. ಆದರೆ ಆಗ, ಬಿಜೆಪಿ ಬಹುಮತ ಇಲ್ಲದ ಕಾರಣ, ಸರ್ಕಾರ ರಚನೆ ಮಾಡಲು ಆಗಲಿಲ್ಲ. ಬಿಜೆಪಿಗೆ ಸರ್ಕಾರ ರಚನೆಗೆ ಬೇಕಾದ ಬಹುಮತಕ್ಕೆ 40 ಸ್ಥಾನಗಳ ಕೊರತೆ ಇದ್ದರೂ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸರ್ಕಾರ ರಚನೆಗೆ ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ಗೆ ಬಹುಮತ ಇದೆ ಆದರೂ ರಾಜ್ಯಪಾಲರು ಬಹುಮತ ಇಲ್ಲದ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ನಿರ್ಧಾರ ದುರುದ್ದೇಶದಿಂದ ಕೂಡಿದ್ದು ಸಂವಿಧಾನಬಾಹಿರವಾಗಿದೆ. ಅಲ್ಲದೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ದೇವೇಂದ್ರ ಫಡ್ನವಿಸ್ ಅವರಿಗೆ ಒಂದು ವಾರ ಕಾಲಾವಕಾಶ ನೀಡಿರುವುದು ಕಾನೂನು ಬಾಹಿರವಾಗಿದೆ. ಇದು ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಹೀಗಾಗಿ ಅವರು ತಮ್ಮ ಬಹುಮತವನ್ನು 24 ಗಂಟೆಯಲ್ಲಿ ಸಾಬೀತಪಡಿಸುವಂತೆ ಸೂಚಿಸಬೇಕು ಎಂದು ಮೂರು ಪಕ್ಷಗಳು ಮನವಿ ಮಾಡಿದೆ.
ಶಿವಸೇನೆ, ಕಾಂಗ್ರೆಸ್, ಎನ್ ಸಿ ಪಿ ಮೈತ್ರಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದ್ದ ಬೆನ್ನಲ್ಲೇ ರಾತ್ರಿ ಬೆಳಗಾಗುವುದರೊಳಗೆ ಮುಖ್ಯಮಂತ್ರಿ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಪ್ರಮಾಣವಚನ ಸ್ವೀಕರಿಸಿದರು.