ನವದೆಹಲಿ, ನ.26(Daijiworld News/SS): ಮಹಾರಾಷ್ಟ್ರ ಸರ್ಕಾರ ರಚನೆ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.
ಸುಪ್ರೀಂ ಕೋರ್ಟ್'ನಲ್ಲಿ ನ್ಯಾಯಮೂರ್ತಿಗಳಾದ ಎನ್ ವಿ ರಮಣ, ಅಶೋಕ್ ಭೂಷಣ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಎರಡು ದಿನಗಳ ಕಾಲ ಸುದೀರ್ಘ ವಾದ-ವಿವಾದ ಆಲಿಸಿ ಇಂದಿಗೆ ತೀರ್ಪು ಪ್ರಕಟ ಕಾಯ್ದಿರಿಸಿದ್ದು, ಇಂದು ನೀಡುವ ತೀರ್ಪಿನ ಮೇಲೆ ಮಹಾರಾಷ್ಟ್ರ ಸರ್ಕಾರ ಮತ್ತು ವಿವಿಧ ರಾಜಕೀಯ ಪಕ್ಷಗಳ ಭವಿಷ್ಯ ನಿಂತಿದೆ.
ರಾಷ್ಟ್ರಪತಿ ಆಡಳಿತವನ್ನು ಏಕಾಏಕಿ ಬೆಳಗ್ಗೆಯೇ ಹಿಂತೆಗೆದುಕೊಂಡು ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಎನ್ ಸಿಪಿಯ ಅಜಿತ್ ಪವಾರ್ ಅವರಿಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ಮಾಡಿಕೊಟ್ಟಿರುವ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಶನಿವಾರ ಸುಪ್ರೀಂ ಕೋರ್ಟ್'ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.