ಚೆನ್ನೈ, ಡಿ.02(Daijiworld News/SS): ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಬಲಗೊಳ್ಳುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿಯೂ ಭಾರಿ ಮಳೆ ಸುರಿಯುತ್ತಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತಮಿಳುನಾಡಿನ ತಿರುವಲ್ಲೂರು, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಪಾಂಡಿಚೇರಿಯಲ್ಲೂ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಲ್ಲಿ ಕೂಡ ಬೆಳಗ್ಗೆ ಇಂದಲೇ ತುಂತುರು ಮಳೆ ಆರಂಭವಾಗಿದೆ. ಮುಂದಿನ 2 ದಿನಗಳ ಕಾಲ ಹಗುರದಿಂದ ಕೂಡಿದ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಭಾಗದಲ್ಲಿ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರನ್ನು ನಿಯೋಜನೆ ಮಾಡಲಾಗಿದೆ