ಬೆಂಗಳೂರು, ಡಿ 09 (Daijiworld News/MB) : ಅನರ್ಹ ಶಾಸಕರಿಂದ ತೆರವುಗೊಂಡಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದು ತಮ್ಮ ಸರಕಾರವನ್ನು ಉಳಿಸಿಕೊಂಡಿದೆ.
ಆದರೆ ಕಾಂಗ್ರೆಸ್ ಕೇವಲ 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು ಜೆಡಿಎಸ್ ತನ್ನ ಖಾತೆಯನ್ನೇ ತೆರೆದಿಲ್ಲ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವು ಕಂಡಿದ್ದು ಮತದಾರರ ಸಮ್ಮತಿ ದೊರೆತಲ್ಲಿ ಬಿಜೆಪಿ ಸೇರುವ ಚಿಂತನೆ ನಡೆಸುತ್ತಿದ್ದಾರೆ.
ಕಳೆದ ಬಾರಿ ಜೆಡಿಎಸ್ ಗೆಲುವು ಸಾಧಿಸಿದ್ದ ಮೂರು ಕ್ಷೇತ್ರಗಳಲ್ಲಿ ಈ ಬಾರಿ ಪರಾಭವಗೊಂಡಿದ್ದಾರೆ. ಅಷ್ಟು ಮಾತ್ರವಲ್ಲದೇ ಜೆಡಿಎಸ್ ಭದ್ರಕೋಟೆಯಾಗಿದ್ದ ಕೆಆರ್ ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಗೆಲುವು ಸಾಧಿಸಿದ್ದಾರೆ.
ಕಳೆದ ಚುನಾವಣೆ ಸಂದರ್ಭದಲ್ಲಿ ನಾರಾಯಣ ಗೌಡ ಜೆಡಿಎಸ್ ಅಭ್ಯರ್ಥಿಯಾಗಿ ಜಯ ಕಂಡಿದ್ದರು. ಆದರೆ ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಿಂತರೂ ಕೂಡಾ ಗೆಲುವನ್ನು ತನ್ನದಾಗಿಸಿದ್ದಾರೆ.
ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಜೆಡಿಎಸ್ ಅಭ್ಯರ್ಥಿ ದೇವರಾಜ್ ಬಿಎಲ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಶಿವಾಜಿನಗರ ಹಾಗೂ ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ರಿಜ್ವಾನ್ ಅರ್ಷದ್ ಹಾಗೂ ಹೆಚ್.ಪಿ.ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ.
ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹಾಗೂ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದಾರೆ.
ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿ.ವೈ. ಘೋರ್ಪಡೆ ಹಾಗೂ ಜೆಡಿಎಸ್ ಅಭ್ಯರ್ಥಿ ಎನ್.ಎಂ. ನಬಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಅಥಣಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿಯವರು ಕಾಂಗ್ರೆಸ್ ಅಭ್ಯರ್ಥಿ ಜಿ.ಬಿ.ಮಂಗ್ಸೂಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್'ಟಿ. ಸೋಮಶೇಖರ್ ಅವರು ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಯಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಅವರು ಗೆಲುವು ಸಾಧಿಸಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ಹಾಗೂ ಜೆಡಿಎಸ್ ಅಭ್ಯರ್ಥಿ ಕಾಂತರಾಜು ವಿರುದ್ಧ ಗೆಲವು ಸಾಧಿಸಿದ್ದಾರೆ.
ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ಭರಮಗೌಡ ಕಾಗೆ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಹಾಗೂ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಅಂಜನಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು ಅವರು, ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ 117 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ, ಜೆಡಿಎಸ್ 34 ಕ್ಷೇತ್ರಗಳಲ್ಲಿ ಹಾಗೂ 3 ಕ್ಷೇತ್ರಗಳಲ್ಲಿ ಸ್ಥಾನ ಪಡೆದಿದ್ದು ಬಿಜೆಪಿ ತನ್ನ ಸರಕಾರವನ್ನು ಉಳಿಸಿಕೊಂಡಿದೆ.