ಬೆಂಗಳೂರು, ಡಿ 09(Daijiworld News/MSP): ರಾಜ್ಯದಲ್ಲಿ ನಡೆದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನಗಳಲ್ಲಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಪ್ರಾಮಾಣಿಕ ಶ್ರಮದ ಹೊರತಾಗಿಯೂ ಉಪಚುನಾವಣೆಯಲ್ಲಿ ತೃಪ್ತಿಕರ ಫಲಿತಾಂಶ ತರಲು ನನ್ನಿಂದ ಸಾಧ್ಯವಾಗದ ಕಾರಣ ರಾಜೀನಾಮೆ ಸಲ್ಲಿಸುತ್ತೇನೆ. ಮತ್ತು ನಿಮ್ಮ ನಾಯಕತ್ವದಲ್ಲಿ ಮುನ್ನಡೆಯುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಪಕ್ಷದ ಹಿತದೃಷ್ಟಿಯಿಂದ ಸೋಲಿನ ಹೊಣೆಹೊತ್ತು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ. ಆದರೆ ಹೈಕಮಾಂಡ್ ಆತುರದ ನಿರ್ಧಾರ ಬೇಡ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.