ನವದೆಹಲಿ, ಡಿ 16 (Daijiworld News/MB) : ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಲ್ಲೇ ಇದ್ದು ಭಾನುವಾರ ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು ಈ ವೇಳೆ 50 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದರು. ನಂತರ ಎಲ್ಲಾ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಹಿಂಸಾಚಾರ ತಣ್ಣಗಾದ ಬೆನ್ನಲ್ಲೇ ಭಾನುವಾರ ದೆಹಲಿ ಹಾಗೂ ಉತ್ತರಪ್ರದೇಶದ ಅಲಿಗಢದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು ವಿದ್ಯಾರ್ಥಿಗಳು ಪ್ರತಿಭಟನೆ ವೇಳೆ 4 ಬಸ್, 2 ಅಗ್ನಿಶಾಮಕ ವಾಹನ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿಯು ಪೊಲೀಸರಿಂದಲ್ಲೇ ಬಸ್ಗಳಿಗೆ ಬೆಂಕಿ ಹಚ್ಚಿಸಿದ್ದು, ಕೊಳಕು ರಾಜಕೀಯ ನಡೆಸಿದೆ ಎಂದು ಆರೋಪ ಮಾಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಹಿಂಸಾಚಾರದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ರಾತ್ರಿಯಷ್ಟೇ ದೆಹಲಿ ಅಲ್ಪಸಂಖ್ಯಾತ ಆಯೋಗ ಕಲ್ಕಾಜಿ ಪೊಲೀಸ್ ಠಾಣಾಧಿಕಾರಿಗಳಿಗೆ ನಿರ್ದೇಶನವೊಂದನ್ನು ನೀಡಿತ್ತು. ಹಿಂಸಾಚಾರದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕೂಡಲೇ ಅವರನ್ನು ಬಿಡುಗಡೆಗೊಳಿಸಿ, ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕೆಂದು ಆಗ್ರಹಿಸಿತ್ತು. ಅಲ್ಲದೆ, ಮೂರುಗಂಟೆಯೊಳಗಾಗಿ ಈ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತ್ತು.