ಲಕ್ನೋ, ಡಿ 16 (Daijiworld News/MB) : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ದಿಲ್ಲಿಯ ಜಾಮೀಯಾ ಮಿಲ್ಲಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಮೇಲೆ ಪೋಲಿಸರು ಲಾಟಿಚಾರ್ಚ್ ಮಾಡಿದ್ದನ್ನು ಖಂಡಿಸಿ ಅಲಿಗಢ್ ಮುಸ್ಲಿಮ್ ಯೂನಿರ್ವಸಿಟಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನೆಯನ್ನು ತಡೆಯುವ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳನ್ನು ಕ್ಯಾಂಪಸ್ ನಿಂದ ಖಾಲಿ ಮಾಡಿಸಿ ಮನೆಗಳಿಗೆ ಕಳುಹಿಸಲಾಗಿದೆ ಎಂದು ವರದಿಯೊಂದರಿಂದ ತಿಳಿದು ಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಉತ್ತರಪ್ರದೇಶ ಪೊಲೀಸ್ ಮಹಾನಿರ್ದೇಶಕ ಒಪಿ ಸಿಂಗ್ ಅಲಿಗಢ್ ಮುಸ್ಲಿಮ್ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಯುವ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆಯಾಗಿತ್ತು. ಈ ನಿಟ್ಟಿನಲ್ಲಿ ನಾವು ಕ್ಯಾಂಪಸ್ ನಿಂದ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.
ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದ ಸಂದರ್ಭದಲ್ಲಿ 10 ಜನ ಪೊಲೀಸರು ಹಾಗೂ 30 ವಿದ್ಯಾರ್ಥಿಗಳಿಗೆ ಗಾಯವಾಗಿದ್ದು ಈ ನಿಟ್ಟಿನಲ್ಲಿ ಪೊಲೀಸರು ಎಲ್ಲಾ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಿಂದ ತೆರವುಗೊಳಿಸಲು ಆಗ್ರಹ ಮಾಡಿದ್ದರು.
ಹಿಂಸಾಚಾರ ನಡೆಸಿದ ಹಿನ್ನಲೆಯಲ್ಲಿ ಸುಮಾರು 15 ವಿದ್ಯಾರ್ಥಿಗಳನ್ನು ಬಂಧಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಗ್ ತಿಳಿಸಿದ್ದಾರೆ.
ಇತ್ತ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಟಿಚಾರ್ಚ್ ನಡೆಸಿ 50 ವಿದ್ಯಾರ್ಥಿಗಳನ್ನು ಬಂಧಿಸಿದ ಹಿನ್ನಲೆಯಲ್ಲಿ ಹಲವು ವಿದ್ಯಾರ್ಥಿಗಳು ಸುರಕ್ಷತೆಗಾಗಿ ವಿಶ್ವವಿದ್ಯಾನಿಲಯದಿಂದ ತಮ್ಮ ಮನೆಗೆ ತೆರಳುತ್ತಿದ್ದಾರೆ.
ಪೊಲೀಸರು ನಮ್ಮ ಸಹಪಾಠಿಗಳಿಗೆ ವಿನಾಕಾರಣ ಥಳಿಸಿದ್ದು ಕ್ರೂರವಾಗಿ ವರ್ತಿಸಿದ್ದಾರೆ. ಪೊಲೀಸರು ಬಾತ್ ರೂಂ, ಲೈಬ್ರೆರಿಗಳಿಗೆ ನುಗ್ಗಿ ಹುಡುಗಿಯರಿಗೆ ಕೂಡಾ ಥಳಿಸಿದ್ದಾರೆ. ನಮ್ಮ ಪ್ರತಿಭಟನೆ ದೆಹಲಿ ಪೊಲೀಸರ ವಿರುದ್ಧ ಎಂದು ಹೇಳಿ ಬರಿ ಮೈಯಲ್ಲಿ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡುತ್ತಿದ್ದಾರೆ.
ಪೊಲೀಸರು ಒಳನುಗ್ಗಿದಾಗ ನಾವು ವಿಶ್ವವಿದ್ಯಾಲಯ ಒಳಗಿದ್ದೆವು. ಸುಮಾರು 20 ಪೊಲೀಸರು ಗೇಟ್ ನಂಬರ್ 7ಕ್ಕೆ ಬಂದು ಪಕ್ಕದ ಗೇಟ್ ನಿಂದ 50 ಮಂದಿ ಬಂದರು. ನಾವು ಹಿಂಸಾಚಾರದಲ್ಲಿ ತೊಡಗಿಲ್ಲ ಎಂದು ಹೇಳಿದರೂ ಕೇಳಲಿಲ್ಲ. ವಿದ್ಯಾರ್ಥಿನಿಯರನ್ನು ಕೂಡಾ ಬಿಡಲಿಲ್ಲ. ಎಲ್ಲರನ್ನೂ ಥಳಿಸಿದ್ದಾರೆ ಎಂದು ವಿದ್ಯಾರ್ಥಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿಯು ಪೊಲೀಸರಿಂದಲ್ಲೇ ಬಸ್ಗಳಿಗೆ ಬೆಂಕಿ ಹಚ್ಚಿಸಿದ್ದು, ಕೊಳಕು ರಾಜಕೀಯ ನಡೆಸಿದೆ ಎಂದು ಆರೋಪ ಮಾಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಹಿಂಸಾಚಾರದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.