ಬೆಂಗಳೂರು, ಡಿ 18(Daijiworld News/MB) : ಈ ತಿಂಗಳ ಕೊನೆಯ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಹಾಗೂ ಉಪಚುನಾವಣೆಯಲ್ಲಿ ಗೆದ್ದ ನಾಯಕರಿಗಷ್ಟೇ ಸಚಿವ ಸ್ಥಾನವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, "21 ಅಥವಾ 22 ರಂದು ನವದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುತ್ತೇನೆ. ಈ ತಿಂಗಳ ಅಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ಮನವಿ ಮಾಡುವುದು ಸಹಜ. ಚುನಾವಣೆಯಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತದೆ. ಇನ್ನುಳಿದವರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ಹೈಕಮಾಂಡ್ ಜೊತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪ ಅವರ ಮನೆಗೆ ಸಚಿವ ಸ್ಥಾನದ ಆಕಾಂಕ್ಷಿಗಳು ತೆರಳಿ ಚರ್ಚೆ ನಡೆಸುತ್ತಿದ್ದಾರೆ. ಮಂಗಳವಾರ ಡಾಲರ್ಸ್ ಕಾಲೋನಿಯಲ್ಲಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ, ನಾರಾಯಣಗೌಡ ಸೇರಿದಂತೆ ಹಲವು ನಾಯಕರು ಆಗಮಿಸಿದ್ದು ಈ ಸಂದರ್ಭದಲ್ಲಿ ಸಚಿವ ಸ್ಥಾನದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.