ಮಂಗಳೂರು, ಡಿ 19(Daijiworld News/MSP): 'ಬಡವರಿಗೆ ಕಡಿಮೆ ದರದಲ್ಲಿ ಆಹಾರ ನೀಡುತ್ತಿರುವ , ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಜಾರಿಗೆ ತಂದ ಮಹತ್ವಾಕಾಂಕ್ಷಿ ಯೋಜನೆಯೇ ’ಇಂದಿರಾ ಕ್ಯಾಂಟೀನ್'.
ಆದರೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿ "ಮಹರ್ಷಿ ವಾಲ್ಮೀಕಿ ಅನ್ನಕುಟೀರ" ಎಂದು ಪುನರ್ ನಾಮಕರಣ ಮಾಡಲು ಬಿಜೆಪಿ ವಲಯದದಲ್ಲಿ ಜೋರಾದ ಚರ್ಚೆ ಕೇಳಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು "ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವುದಿಲ್ಲ ಎಂಬ ಸಿಎಂ ನೀಡಿದ ಭರವಸೆಗೆ ಧನ್ಯವಾದ" ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿ, "ಮಹರ್ಷಿ ವಾಲ್ಮೀಕಿ ಅನ್ನಕುಟೀರ" ಅಂತಾ ಮರುನಾಮಕರಣ ಮಾಡಲು ತೀರ್ಮಾನ ಮಾಡುತ್ತೇವೆ ಅಂತಾ ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್. ಅಶೋಕ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.
ಬಿಜೆಪಿ ವಲಯದಲ್ಲಿ ಚರ್ಚೆ ಜೋರಾಗುತ್ತಿದ್ದಂತೆ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆ ಸಮಾಲೋಚನೆ ನಡೆಸಿದ್ದಾರೆ. ’ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸುವ ಉದ್ದೇಶ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳು ಆಡಿದ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಅವರಿಗೆ ಧನ್ಯವಾದಗಳು. ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.