ಬೆಂಗಳೂರು, ಡಿ 19 (Daijiworld News/PY) : ಕೇಂದ್ರ ಸರ್ಕಾರದಿಂದ ಜಾರಿಗೆ ಬಂದಿರುವ ನೂತನ ಪೌರತ್ವ ಕಾಯ್ದೆಯನ್ನು ವಿರೋಧಿಸಿ ದೇಶದಾದ್ಯಂತ ಕಿಚ್ಚು ಹತ್ತಿಕೊಂಡಿದ್ದು, ಈ ವಿಚಾರವಾಗಿ ಬೆಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಖ್ಯಾತ ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೌರತ್ವ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ನಿಟ್ಟಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಡಿಸೆಂಬರ್ 21ರವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಇದನ್ನು ನಿರಾಕರಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರಾಮಚಂದ್ರ ಗುಹಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ ನನ್ನನ್ನು ಪೊಲೀಸರು ಬಂಧಿಸಿದ್ದಾರೆ, ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು ಎಂದು ತಿಳಿಸಿದ್ದಾರೆ.
ಇನ್ನು ಪ್ರತಿಭಟನೆಗೆ ಸಂಬಂಧಪಟ್ಟಂತೆ ದೆಹಲಿ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಗ್ರವಾದ ಹೋರಾಟ ನಡೆಯುತ್ತಿದ್ದು, ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಈ ಕಾಯ್ದೆಯ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.