ಬೆಂಗಳೂರು,ಡಿ 23 (Daijiworld News/MB) : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, "ಮಂಗಳೂರು ನಡೆದ ಗೋಲಿಬಾರ್ನಿಂದ ಇಬ್ಬರು ಮೃತಪಟ್ಟ ಪ್ರಕರಣದ ಕುರಿತು ತನಿಖೆ ನಡೆಸಲು ನಾವು ಸಿಐಡಿಗೆ ಒಪ್ಪಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಈ ಪ್ರತಿಭಟನೆಯ ವೇಳೆ ಇಬ್ಬರು ಪೋಲಿಸರ ಗುಂಡೇಟಿಗೆ ಬಲಿಯಾಗಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪ ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದು ಗೋಲಿಬಾರ್ ಮಾಡುವುದು ಅನಿವಾರ್ಯವಾಗಿತ್ತು ಎಂದು ಹೇಳಿದ್ದರು. ಹಾಗೆಯೇ ಭಾನುವಾರ ಮೃತರ ಕುಟುಂಬಕ್ಕೆ ತಲಾ ಹತ್ತು ಲಕ್ಷ ಪರಿಹಾರ ಘೋಷಿಸಿದ್ದರು.