ಘಾಜಿಯಾಬಾದ್, ಅ.29 (DaijiworldNews/AA): ಯುಪಿಎಸ್ಸಿ ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯನ್ನು ಕೆಲವರು ತಮ್ಮ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುವಲ್ಲಿ ಸಫಲರಾದರೆ, ಕೆಲ ಅಭ್ಯರ್ಥಿಗಳು ತಮ್ಮ ಎರಡು ಮೂರು ಪ್ರಯತ್ನಗಳ ಬಳಿಕ ಉತ್ತೀರ್ಣರಾಗುತ್ತಾರೆ. ಹೀಗೆ ತಮ್ಮ ಮೂರನೇ ಪ್ರಯತ್ನದಲ್ಲಿ 2025ರ ಯುಪಿಎಸ್ಸಿ ಪರೀಕ್ಷೆಯಲ್ಲಿ 30ನೇ ರ್ಯಾಂಕ್ ಗಳಿಸಿದ ನಿಕಿತಾ ವರ್ಮಾ ಯಶೋಗಾಥೆ ಇದು.

ಉತ್ತರ ಪ್ರದೇಶದ ಘಾಜಿಯಾಬಾದ್ ಮೂಲದ ನಿಕಿತಾ ಅವರು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ವಾತಾವರಣದಲ್ಲಿ ಬೆಳೆದರು. ಅವರ ತಂದೆ ದೆಹಲಿ ಸರ್ಕಾರದಲ್ಲಿ ಡೆಪ್ಯುಟಿ ಸೆಕ್ರೆಟರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ನಿಕಿತಾ ಬಾಲ್ಯದಿಂದಲೂ ರಾಜಕೀಯ, ಆಡಳಿತ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು.
ನಿಕಿತಾ ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ರಾಜಕೀಯ ವಿಜ್ಞಾನದಲ್ಲಿ ಬಿಎ ಪದವಿ ಮತ್ತು ನಂತರ ಅದೇ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು. ಬಳಿಕ ಯುಪಿಎಸ್ಸಿ ಪರೀಕ್ಷೆ ಬರೆಯಲು ನಿರ್ಧರಿಸಿದ ಅವರು, ಐಚ್ಛಿಕ ವಿಷಯವಾಗಿ ರಾಜಕೀಯ ವಿಜ್ಞಾನ ಮತ್ತು ಅಂತರರಾಷ್ಟ್ರೀಯ ಸಂಬಂಧ ವಿಷಯವನ್ನು ಆಯ್ಕೆ ಮಾಡಿಕೊಂಡರು.
ನಿಕಿತಾ ಅವರು ತಮ್ಮ ಮೊದಲ ಎರಡು ಪ್ರಯತ್ನಗಳಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾಗುತ್ತಾರೆ. 2025ರಲ್ಲಿ ಮೂರನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಅವರು 30 ನೇ ರ್ಯಾಂಕ್ ಗಳಿಸುವಲ್ಲಿ ಸಫಲರಾಗುತ್ತಾರೆ. ಈ ಮೂಲಕ ಅನೇಕ ಯುಪಿಎಸ್ಸಿ ಅಭ್ಯರ್ಥಿಗಳಿಗೆ ನಿಕಿತಾ ಸ್ಫೂರ್ತಿಯಾಗಿದ್ದಾರೆ.