ಜಾರ್ಖಂಡ್, ಡಿ 29(Daijiworld News/PY) : ಜಾರ್ಖಂಡ್ನಲ್ಲಿ ಜೆಎಂಎಂ, ಕಾಂಗ್ರೆಸ್ ಹಾಗೂ ಆರ್ಜೆಡಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಎಂಎಂನ ನಾಯಕ ಹೇಮಂತ್ ಸೋರೆನ್ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಂಚಿಯಲ್ಲಿನ ಮೋಹ್ರಾಬಡಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು ಹೇಮಂತ್ ಸೋರೆನ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಚತ್ತೀಸ್ ಗಢ್ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಆರ್ ಜೆಡಿ ಕಾರ್ಯಾಧ್ಯಕ್ಷ ತೇಜಸ್ವಿ ಯಾದವ್ ಸೇರಿದಂತೆ ಪ್ರತಿಪಕ್ಷದ ಪ್ರಮುಖ ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.