ಶ್ರೀನಗರ, ಜ 01 (DaijiworldNews/SM): ಜಮ್ಮು–ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ನ ಖಾರಿ ತ್ರಯಾತ್ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಖಾರಿ ತ್ರಯಾತ್ ಅರಣ್ಯ ಪ್ರದೇಶದಲ್ಲಿ ಶಂಕಿತ ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಶೋಧ ಕಾರ್ಯ ಕೈಗೊಂಡಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಉಗ್ರರನ್ನು ಸದೆಬಡಿಯುವಲ್ಲಿ ಸೇನೆಯು ಮೇಲುಗೈ ಸಾಧಿಸುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಭಾರತೀಯ ಸೇನೆಯೂ ಪ್ರತಿ ದಾಳಿ ನಡೆಸಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಸೇನಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಜಮ್ಮು–ಕಾಶ್ಮೀರದಲ್ಲಿ 2019ರಲ್ಲಿ 160 ಉಗ್ರರನ್ನು ಹತ್ಯೆ ಮಾಡಲಾಗಿದ್ದು, 102 ಭಯೋತ್ಪಾದಕರನ್ನು ಬಂಧಿಸಲಾಗಿದೆ.