ಬೆಂಗಳೂರು, ಜ 02 (Daijiworld News/MB) : ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು 2-15ಕ್ಕೆ ಹೆಲಿಕಾಪ್ಟರ್ ಮೂಲಕ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಲಿಸಲಿದ್ದು ಮಠದಲ್ಲಿ ಡಾ. ಶಿವಕುಮಾರ್ ಸ್ವಾಮೀಜಿ ಅವರಿಗೆ ಸಂಬಂಧಿಸಿದ ವಸ್ತು ಸಂಗ್ರಹಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಬಳಿಕ ಸಂಜೆ 5-10ಕ್ಕೆ ತುಮಕೂರಿನ ಸರ್ಕಾರಿ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೃಷಿ ಕರ್ಮಣ್ ಪ್ರಶಸ್ತಿ ಹಾಗೂ ಮೀನುಗಾರರಿಗೆ ಸಲಕರಣೆಗಳನ್ನು ವಿತರಣೆ ಮಾಡಲಿದ್ದು ಸಂಜೆ 5-50ಕ್ಕೆ ಬೆಂಗಳೂರಿಗೆ ವಾಪಾಸ್ ಬಂದು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ - ಡಿಆರ್ ಡಿಒಗೆ ಭೇಟಿ ನೀಡಿ ಅಲ್ಲಿಂದ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಜಿಕೆವಿಕೆ ಕ್ಯಾಂಪಸ್ ಆವರಣದಲ್ಲಿ ಆಯೋಜಿಸಲಾಗಿರುವ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾಗವಹಿಸಿ ನವದೆಹಲಿಗೆ ವಾಪಾಸ್ ಹೋಗಲಿದ್ದಾರೆ. ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಬೆಂಗಳೂರು ಹಾಗೂ ತುಮಕೂರಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.