ನವದೆಹಲಿ, ನ.07 (DaijiworldNews/AA): ಕಳೆದ 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಪ್ರಭುತ್ವ, ಸಾಂವಿಧಾನಿಕ ಸಂಸ್ಥೆಗಳು ಹಾಗೂ ಸಾಮಾಜಿಕ ವ್ಯವಸ್ಥೆಗೆ ದೊಡ್ಡ ಪ್ರಮಾಣದ ಹಾನಿ ಮಾಡಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಆತ್ಮಕಥನದ ಬಿಡುಗಡೆ ಹಿನ್ನೆಲೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, "ಕಳೆದ 12 ವರ್ಷಗಳಲ್ಲಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಸಾಕಷ್ಟು ಹಾನಿಯಾಗಿದೆ. ಪ್ರಸ್ತುತ ಸರ್ಕಾರ ಅಧಿಕಾರದಿಂದ ಹೊರಬಂದ ನಂತರವೂ ದೇಶದ ವ್ಯವಸ್ಥೆಗಳನ್ನು ಮತ್ತೆ ಆರೋಗ್ಯಕರ ಸ್ಥಿತಿಗೆ ತರಲು ಸಾಕಷ್ಟು ಸಮಯ ಹಾಗೂ ರಾಜಕೀಯ ಪಕ್ಷಗಳ ನಿರಂತರ ಪ್ರಯತ್ನ ಅಗತ್ಯವಾಗಲಿದೆ" ಎಂದರು.
"ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳಿಗೆ ಸಮಾನ ರಾಜಕೀಯ ಅವಕಾಶಗಳು ದೊರೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗ ಸೇರಿದಂತೆ ವಿವಿಧ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಆಡಳಿತಾರೂಢ ಪಕ್ಷದ ಪ್ರಭಾವವಿದೆ. ಮುಖ್ಯವಾಹಿನಿ ಮಾಧ್ಯಮಗಳ ಮೇಲಿನ ನಿಯಂತ್ರಣ, ಆರ್ಥಿಕ ಬಲ ಹಾಗೂ ಧರ್ಮದ ರಾಜಕೀಯ ಬಳಕೆಯೂ ವಿರೋಧ ಪಕ್ಷಗಳಿಗೆ ಸವಾಲಾಗಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ.
"ಇಷ್ಟೆಲ್ಲ ಸವಾಲುಗಳ ನಡುವೆಯೂ ಕಾಂಗ್ರೆಸ್ ಪಕ್ಷ ಹೋರಾಟ ಮುಂದುವರಿಸಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ವಿವಿಧ ರೀತಿಯ ಕಿರುಕುಳಗಳನ್ನು ಎದುರಿಸಿದ್ದಾರೆ. ಆದರೂ ದೇಶದ ಪ್ರತಿಯೊಂದು ಗ್ರಾಮ ಮತ್ತು ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂವಿಧಾನದ ಮೌಲ್ಯಗಳಿಗಾಗಿ ಹೋರಾಡುತ್ತಿದ್ದಾರೆ" ಎಂದು ಹೇಳಿದರು.
"ಇತ್ತೀಚಿನ ತಿಂಗಳುಗಳಲ್ಲಿ ಹಲವು ಚುನಾವಣೆಗಳಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ. ಈ ಬಗ್ಗೆ ಜನರಲ್ಲಿ ಅರಿವು ಹೆಚ್ಚುತ್ತಿದೆ. ಕಾಂಗ್ರೆಸ್ ಪಕ್ಷವು ಸಮಾನ ಮನಸ್ಕ ರಾಜಕೀಯ ಪಕ್ಷಗಳೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದ್ದು, ಪಕ್ಷದ ರಾಜಕೀಯ ಭವಿಷ್ಯ ದಿನದಿಂದ ದಿನಕ್ಕೆ ಸುಧಾರಿಸುತ್ತಿದೆ" ಎಂದು ನುಡಿದರು.