ಲಕ್ನೋ, ನ.09 (DaijiworldNews/TA): ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಅತಿವೇಗದಿಂದ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎಕ್ಸ್ಪ್ರೆಸ್ವೇಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯ ಪಕ್ಕದಲ್ಲಿದ್ದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಹಾಗೂ ಮೇಲ್ಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು, ಎಕ್ಸ್ಪ್ರೆಸ್ವೇ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಗಾಯಾಳುಗಳನ್ನು ತಕ್ಷಣವೇ ಸಮೀಪದ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ. ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.