ಹಾಸನ, ನ.10 (DaijiworldNews/TA): ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಈ ಬಾರಿ ಜಾತ್ರಾ ಮಹೋತ್ಸವದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಕೊನೆಯ ದಿನವಾದ ಇಂದು ನಿರೀಕ್ಷೆಗೂ ಮೀರಿ ಭಕ್ತರ ಮಹಾಪೂರ ಹರಿದುಬರುವ ಸಾಧ್ಯತೆಯಿದೆ. ಬುಧವಾರ ಮಧ್ಯಾಹ್ನ 12 ಗಂಟೆಯ ಬಳಿಕ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಹೀಗಾಗಿ ಇಂದು ದೇವಿಯ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದೆ.

ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ನಿರ್ಮಿಸಿದೆ. ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದಲೂ ಕೋಟ್ಯಂತರ ರೂಪಾಯಿ ಆದಾಯ ಸಂಗ್ರಹವಾಗಿದೆ. ಕೊನೆಯ ದಿನ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಭಕ್ತರಲ್ಲಿ ಮನವಿ ಮಾಡಿದ್ದಾರೆ. ದರ್ಶನಕ್ಕೆ 10ರಿಂದ 12 ಗಂಟೆಗಳವರೆಗೆ ಕಾಯಬೇಕಾದ ಪರಿಸ್ಥಿತಿ ಎದುರಾಗಬಹುದು. ಆದ್ದರಿಂದ ಭಕ್ತರು ತಾಳ್ಮೆಯಿಂದ ಆಗಮಿಸುವಂತೆ ಸೂಚಿಸಿದ್ದಾರೆ.
ದರ್ಶನದ ಸಮಯದಲ್ಲಿ ಬದಲಾವಣೆ: ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಿರಂತರ 11 ಗಂಟೆಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 7 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಈ ಅವಧಿಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ಕಾಯಬೇಕಾಗುತ್ತದೆ. ಮಧ್ಯರಾತ್ರಿ 1 ಗಂಟೆಯಿಂದ ಬುಧವಾರ ಬೆಳಿಗ್ಗೆ 7 ಗಂಟೆಯವರೆಗೆ ಮತ್ತೆ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರಲಿದೆ. ನಾಳೆ ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ಗೋಲ್ಡ್ ಪಾಸ್ ಹೊಂದಿರುವವರಿಗೆ ಹಾಗೂ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ವಿವಿಧ ಕ್ಷೇತ್ರಗಳ ಗಣ್ಯರಿಗೆ ಪ್ರೋಟೋಕಾಲ್ ಪ್ರಕಾರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಈ ಅವಧಿಯಲ್ಲಿ ಧರ್ಮದರ್ಶನ ಹಾಗೂ 1,000 ಮತ್ತು 300 ರೂ. ವಿಶೇಷ ದರ್ಶನದ ಸಾಲಿನಲ್ಲಿ ಕಾಯುವ ಭಕ್ತರಿಗೆ ದರ್ಶನ ವಿಳಂಬವಾಗುವ ಸಾಧ್ಯತೆಯಿದೆ.
ಕೊನೆಯ ದಿನ ಭಕ್ತರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಯಾವುದೇ ಗೊಂದಲ ಅಥವಾ ನೂಕುನುಗ್ಗಲು ಉಂಟಾಗದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ವ್ಯವಸ್ಥೆಗಳನ್ನು ಕೈಗೊಂಡಿವೆ. ಭಕ್ತರಿಗೆ ಸುಗಮ ದರ್ಶನ ಕಲ್ಪಿಸಲು ವಿಶೇಷ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಬುಧವಾರ ಮಧ್ಯಾಹ್ನ ವಿಶ್ವರೂಪ ದರ್ಶನದ ಬಳಿಕ ಹಾಸನಾಂಬ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದ್ದು, ಈ ವರ್ಷದ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.