ನವದೆಹಲಿ, ನ.10 (DaijiworldNews/TA): ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 13 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. 2013ರಲ್ಲಿ ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆ ಹಾಗೂ ಗಲಾಟೆ ಪ್ರಕರಣದ ತನಿಖೆಯನ್ನು ಮತ್ತೆ ಕೈಗೆತ್ತಿಕೊಂಡಿರುವ ಪೊಲೀಸರು, ಈ ಸಂಬಂಧ ಮಮತಾ ಬ್ಯಾನರ್ಜಿ ಅವರಿಂದ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.

ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಆರೋಪಿಯಾಗಿಲ್ಲ. ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಾರಣ ಸಾಕ್ಷಿಯಾಗಿ ಹೇಳಿಕೆ ನೀಡುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ. 2013ರ ಏಪ್ರಿಲ್ 9ರಂದು ದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಪ್ರತಿಭಟನೆ ವೇಳೆ ಗಲಾಟೆ ನಡೆದಿದ್ದು, ಅಂದಿನ ಪಶ್ಚಿಮ ಬಂಗಾಳದ ಹಣಕಾಸು ಸಚಿವ ಅಮಿತ್ ಮಿತ್ರಾ ಅವರ ಮೇಲೆ ಎಸ್ಎಫ್ಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಘಟನೆ ಉದ್ವಿಗ್ನ ಸ್ವರೂಪ ಪಡೆದುಕೊಂಡ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಈ ಸಂಬಂಧ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 13 ವರ್ಷಗಳ ಹಿಂದಿನ ಈ ಪ್ರಕರಣದ ತನಿಖೆಯನ್ನು ಮುಂದುವರಿಸಲು ದೆಹಲಿ ಪೊಲೀಸರು ಇದೀಗ ಮುಂದಾಗಿದ್ದಾರೆ. ಘಟನೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಸ್ಥಳದಲ್ಲೇ ಹಾಜರಿದ್ದ ಹಿನ್ನೆಲೆಯಲ್ಲಿ, ಅವರ ಹೇಳಿಕೆಯನ್ನು ಸಾಕ್ಷಿಯಾಗಿ ದಾಖಲಿಸಿಕೊಳ್ಳಲು ನೋಟಿಸ್ ಜಾರಿಗೊಳಿಸಲಾಗಿದೆ. ಹಳೆಯ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿರುವುದು ರಾಜಕೀಯ ವಲಯದಲ್ಲೂ ಗಮನ ಸೆಳೆದಿದ್ದು, ಮಮತಾ ಬ್ಯಾನರ್ಜಿ ಅವರ ಹೇಳಿಕೆ ದಾಖಲಾದ ಬಳಿಕ ತನಿಖೆಯಲ್ಲಿ ಯಾವ ಬೆಳವಣಿಗೆಗಳಾಗಲಿವೆ ಎಂಬ ಕುತೂಹಲ ಮೂಡಿದೆ.