ಮುಂಬೈ, ನ.10 (DaijiworldNews/TA): ದೀಪಾವಳಿ ಸಂಭ್ರಮದ ನಡುವೆ ಮುಂಬೈನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಅಂಗಡಿಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿಗಳು ಸ್ಫೋಟಗೊಂಡ ಪರಿಣಾಮ 16 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ವಾಣಿಜ್ಯ ಮಳಿಗೆಯೊಂದರಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಈ ವೇಳೆ ಆಕಸ್ಮಿಕವಾಗಿ ಪಟಾಕಿಗಳು ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹಾಗೂ ಗೋಡೆಗಳ ಭಾಗ ಕುಸಿದು ಬಿದ್ದಿವೆ. ದುರಂತದಲ್ಲಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಸ್ಫೋಟದ ಭಾರೀ ಶಬ್ದ ಮತ್ತು ಕಟ್ಟಡದ ಭಾಗಗಳು ಕುಸಿದ ಪರಿಣಾಮ ಸುತ್ತಮುತ್ತಲಿನ ಅಂಗಡಿಗಳ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪಟಾಕಿಗಳ ಸಂಗ್ರಹಣೆ ವೇಳೆ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಮತ್ತು ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.