ಬೆಂಗಳೂರು, ನ.12 (DaijiworldNews/AA): ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಒಂದು ದಿನದ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ವೇಳೆ ಅವರು ನಮ್ಮ ಮೆಟ್ರೋ ಗುಲಾಬಿ ಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದು, 15,600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

ನಾಳೆ ಬೆಳಗ್ಗೆ ಬೆಂಗಳೂರಿನ ಆನೇಕಲ್ ಬಳಿಯ ಪ್ರಶಾಂತಿ ಕುಠೀರದ ಸ್ವರ್ಣ ಜಯಂತಿ ಆಚರಣೆ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.45ಕ್ಕೆ ತಾವರೆಕೆರೆಯಿಂದ ಐಐಎಂ ಬೆಂಗಳೂರು ಮೆಟ್ರೋ ನಿಲ್ದಾಣದವರೆಗಿನ ಮೆಟ್ರೋ ರೈಲಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಅದೇ ರೈಲಿನಲ್ಲಿ ಅವರು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರೊಂದಿಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
ನಂತರ ಅವರು ಐಐಎಂ ಬೆಂಗಳೂರು ಆವರಣದಲ್ಲಿ ನಡೆಯಲಿರುವ ಬೃಹತ್ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಅವರು, ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾ ನಡುವಿನ ಬೆಂಗಳೂರು - ಮಂಗಳೂರು - ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಇದರೊಂದಿಗೆ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿ ಮಾಡಲಾಗಿರುವ ಚಾಮರಾಜನಗರ, ಚಿಕ್ಕಮಗಳೂರು, ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರಸ್ತೆ ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ಘಾಟ್ ನಡುವೆ ವಿದ್ಯುದೀಕರಣಗೊಂಡಿರುವ ೫೫ ಕಿಲೋಮೀಟರ್ ರೈಲು ಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಪ್ರಯಾಣಿಸಲಿದ್ದು, ಭಾರತ ವನದಲ್ಲಿ ನಡೆಯುವ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಅವರು ಕಾಸ್ಮೋಸ್ ಮೈಸೂರು ಖಗೋಳ ವೀಕ್ಷಣಾಲಯವನ್ನು ಉದ್ಘಾಟಿಸಲಿದ್ದಾರೆ.