ಮೈಸೂರು, ನ.14 (DaijiworldNews/TA): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಮಗೆ ದೊರೆತ ಅದ್ಧೂರಿ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಮನಸೋತಿದ್ದಾರೆ. ಮೈಸೂರಿನ ಜನರ ಪ್ರೀತಿ ಮತ್ತು ಆತ್ಮೀಯತೆಗೆ ಧನ್ಯವಾದ ಸಲ್ಲಿಸಿರುವ ಅವರು, ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಮೈಸೂರು ಪ್ರವಾಸದ ಪ್ರಮುಖ ಕ್ಷಣಗಳನ್ನು ಒಟ್ಟುಗೂಡಿಸಿರುವ ಈ ವಿಡಿಯೋದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಪ್ರಧಾನಿ ಮೋದಿಗೆ ಸ್ವಾಗತ ಕೋರುತ್ತಿರುವ ದೃಶ್ಯಗಳು ಗಮನ ಸೆಳೆಯುತ್ತಿವೆ. ಮೈಸೂರಿನ ಜನರು ಅಪಾರ ಉತ್ಸಾಹ ಮತ್ತು ಪ್ರೀತಿಯಿಂದ ಬರಮಾಡಿಕೊಂಡಿದ್ದಾರೆ ಎಂದು ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ನವೆಂಬರ್ 13ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ, ಬೆಂಗಳೂರಿನ ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ಡೋಮ್ ತಾರಾಲಯ 'ಕಾಸ್ಮೋಸ್' ಅನ್ನು ಉದ್ಘಾಟಿಸಿದ್ದರು. ಸುಮಾರು 115 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಅತ್ಯಾಧುನಿಕ ತಾರಾಲಯ ಮೈಸೂರಿನ ವೈಜ್ಞಾನಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡಲಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದರು.
ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೊಳಿಸಿದ್ದ ಪ್ರಧಾನಿ, ಗೋವಾ-ಬೆಂಗಳೂರು ವಂದೇ ಭಾರತ್ ರೈಲಿಗೂ ಚಾಲನೆ ನೀಡಿದ್ದರು. ಅಲ್ಲದೆ, 15,600 ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದರು. ಮೈಸೂರು ಭೇಟಿಯ ಸವಿನೆನಪುಗಳನ್ನು ವಿಡಿಯೋ ಮೂಲಕ ಹಂಚಿಕೊಂಡಿರುವ ಪ್ರಧಾನಿ, ನಗರದ ಜನರ ಪ್ರೀತಿ ಮತ್ತು ಅಭಿಮಾನಕ್ಕೆ ವಿಶೇಷ ಧನ್ಯವಾದ ಸಲ್ಲಿಸಿದ್ದಾರೆ.