ರಾಮನಗರ, ನ.15 (DaijiworldNews/AK): ನಮ್ಮನ್ನು ನಾಯಕರನ್ನಾಗಿ ಬೆಳೆಸಿ ಉಳಿಸಿದ ರಾಮನಗರವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಾಗಮಲೆ ಮಹದೇಶ್ವರ ಸ್ವಾಮಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ರಾಮನಗರವನ್ನು ನಿರ್ಲಕ್ಷಿಸುವ ಪ್ರಶ್ನೆಗೆ ಬರುವುದಿಲ್ಲ. ಪಕ್ಷವನ್ನು ಬಲಪಡಿಸುವುದು ಹಾಗೂ ಸಂಘಟನೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸಮಯವನ್ನು ಜಿಲ್ಲೆಗೆ ಮೀಸಲಿಡಲಾಗುವುದು. ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಕಾರ್ಯಕರ್ತರಿಗೆ ಹಾಗೂ ಅವರ ಭಾವನೆಗಳಿಗೆ ನಾನು ನಿರಾಶೆ ಉಂಟು ಮಾಡುವುದಿಲ್ಲ. ಪಕ್ಷದ ಹಿತಕ್ಕಾಗಿ, ಕಾರ್ಯಕರ್ತರ ಸಲುವಾಗಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ ಎಂದರು.