ಚೆನ್ನೈ, ನ.16 (DaijiworldNews/AK):ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸೋಮವಾರ ಸಂಜೆ ಚಂಡಮಾರುತವಾಗಿ ರೂಪುಗೊಂಡು, ಮಂಗಳವಾರ ಸಂಜೆಯ ವೇಳೆಗೆ ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ದಿಕ್ಕಿನಲ್ಲಿ ಚಲಿಸಿ ಆಂಧ್ರಪ್ರದೇಶದ ಕರಾವಳಿಯತ್ತ ಸಾಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಹಲವು ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಕೆ ಮುನ್ಸೂಚನೆ ನೀಡಿದೆ.
ಐಎಂಡಿ ಪ್ರಕಾರ, ಮಂಗಳವಾರ ಸಂಜೆ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ನವೆಂಬರ್ 18ರಂದು ಹಲವೆಡೆ ಹಗುರದಿಂದ ಮಧ್ಯಮ ಮಳೆಯಾಗುವ ಸಾದ್ಯತೆ ಇದೆ. ಕೆಲವು ಕಡೆ ಭಾರೀ ಮಳೆಯಾಗಬಹುದಾದ ನಿರೀಕ್ಷೆ ಇದೆ.
ನವೆಂಬರ್ 19 ಮತ್ತು 20ರಂದು ಉತ್ತರ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ 21 ಸೆಂಟಿಮೀಟರ್ಗಿಂತ ಹೆಚ್ಚಿನ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 17ರಿಂದ 20ರವರೆಗೆ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಐಎಂಡಿ ತಿಳಿಸಿದೆ. ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ತಮಿಳುನಾಡು ಕರಾವಳಿಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರಿಕೆ ಇಲಾಖೆ ಸೂಚಿಸಿದೆ.
ಬಂಗಾಳಕೊಲ್ಲಿಯಲ್ಲಿನ ಹವಾಮಾನ ವ್ಯವಸ್ಥೆಯ ಪರಿಣಾಮ ಒಡಿಶಾದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಹಲವು ಭಾಗಗಳಲ್ಲಿ ಸಮುದ್ರದ ಪರಿಸ್ಥಿತಿ ಪ್ರಕ್ಷುಬ್ಧವಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ನಿಗದಿತ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಸೂಚಿಸಿದೆ.