ಬೆಂಗಳೂರು , ನ.18 (DaijiworldNews/AK): ಮಾಸಿಕ 15,000 ರೂ. ಗ್ಯಾರಂಟಿ ಗೌರವಧನ ನಿಗದಿ ಹಾಗೂ 5 ಲಕ್ಷ ರೂ. ನಿವೃತ್ತಿ ಇಡಿಗಂಟು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ಆಶಾ ಕಾರ್ಯಕರ್ತೆಯರು ರಾಜಧಾನಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಈ ಬೃಹತ್ ಹೋರಾಟದಲ್ಲಿ ಪಾಲ್ಗೊಂಡಿದ್ದು, ಬೇಡಿಕೆ ಈಡೇರಿಕೆ ಕುರಿತು ರಾಜ್ಯ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ಪತ್ರ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಜಮಾಯಿಸಿದ್ದಾರೆ. ಕರ್ನಾಟಕದಲ್ಲಿ ಸದ್ಯ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ 5,000 ಹಾಗೂ ಕೇಂದ್ರ ಸರ್ಕಾರದಿಂದ 3,000 ಸೇರಿ ಒಟ್ಟು 8,000 ರೂ. ಮಾತ್ರ ಗೌರವಧನ ಸಿಗುತ್ತಿದೆ. ಆದರೆ ನೆರೆಯ ಮತ್ತು ಇತರ ರಾಜ್ಯಗಳಲ್ಲಿ ಹೆಚ್ಚಿನ ಗೌರವಧನ ನೀಡಲಾಗುತ್ತಿದೆ ಎಂದು ಆಶಾಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಮುಖ ಬೇಡಿಕೆಗಳು:
ವಿವಿಧ ರಾಜ್ಯಗಳಲ್ಲಿ ಹೆಚ್ಚಿಸಿರುವಂತೆ, ಕರ್ನಾಟಕದ ಆಶಾ ಕಾರ್ಯಕರ್ತೆಯರಿಗೂ ರಾಜ್ಯ ಸರ್ಕಾರದಿಂದ ಮಾಸಿಕ 15,000 ಗೌರವಧನ ನಿಗದಿಪಡಿಸಬೇಕು.
ಸಮಸ್ತ ಆ್ಯಪ್’ ಮೂಲಕ ಒತ್ತಾಯದ ಮೊಬೈಲ್ ಕೆಲಸ ಕೈಬಿಡಬೇಕು, ಇಲ್ಲವೇ ಮೊಬೈಲ್, ಸೂಕ್ತ ಪ್ರೋತ್ಸಾಹಧನ ಮತ್ತು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.
ಈಗಾಗಲೇ ನಿವೃತ್ತರಾಗಿರುವ ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಇಡಿಗಂಟನ್ನು ಕೂಡಲೇ ಪಾವತಿಸಬೇಕು.
ಆಶಾ ನಿಧಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರೋತ್ಸಾಹಧನಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು.
ಆಶಾ ಸುಗಮಕಾರರನ್ನು ಮರುನೇಮಕ ಮಾಡಿ ಸೂಕ್ತ ವೇತನ ನೀಡಬೇಕು ಹಾಗೂ ಬಾಕಿ ಇರುವ ಒಂದು ವರ್ಷದ 1,500 ಪಾವತಿಸಬೇಕು.
ಎನ್ಐಒಎಸ್ ತರಬೇತಿ ಪೂರ್ಣಗೊಳಿಸಿದ ಆಶಾ ಮತ್ತು ಸುಗಮಕಾರರಿಗೆ ಪ್ರತಿ ತರಬೇತಿಗೆ ₹5,000 ವಿಶೇಷ ಪ್ರೋತ್ಸಾಹಧನ ನೀಡಬೇಕು.
ತೀವ್ರ ಕಾಯಿಲೆಯ ಚಿಕಿತ್ಸಾ ಅವಧಿಯಲ್ಲಿ ಕನಿಷ್ಠ ಮೂರು ತಿಂಗಳ ಗೌರವಧನ ಮತ್ತು ನಿಗದಿತ ಪ್ರೋತ್ಸಾಹಧನ ನೀಡಬೇಕು.
ಸೇವಾ ನಿವೃತ್ತಿ ಇಡಿಗಂಟನ್ನು ಪಶ್ಚಿಮ ಬಂಗಾಳದ ಮಾದರಿಯಲ್ಲಿ 5 ಲಕ್ಷಕ್ಕೆ ಹೆಚ್ಚಿಸಬೇಕು.