ಕಲಬುರಗಿ, ಜ.05 (Daijiworld News/PY) : ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 5, 6 ಮತ್ತು 7 ರಂದು ನಡೆಯುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಭಾನುವಾರ ಜಿಲ್ಲಾಡಳಿತ ಕಚೇರಿಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ ಬಿಡುಗಡೆಗೊಳಿಸಿದರು.
ಕಲಬುರಗಿಯಲ್ಲಿ ಅತಿ ಹೆಚ್ಚು ತೊಗರಿ ಬೆಳೆಯಲಾಗುತ್ತಿದ್ದು, ಹಾಗಾಗಿ ತೊಗರಿ ಬೆಳೆಯನ್ನು ಈ ಲಾಂಛನದಲ್ಲಿ ಬಳಸಿಕೊಳ್ಳಲಾಗಿದೆ. ಈ ಲಾಂಛನದ ಮೇಲ್ಭಾಗದಲ್ಲಿ ಕನ್ನಡಾಂಬೆಯ ಭಾವಚಿತ್ರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಚಿಹ್ನೆ, ಧ್ವಜವನ್ನು ಬಳಸಿಕೊಳ್ಳಲಾಗಿದೆ ಹಾಗೂ ಸಂಭ್ರಮದ ಸೂಚಕವಾಗಿ ಕಲಾತ್ಮಕವಾದ ಜನಪದ ಛತ್ರಿಯನ್ನು ಬಳಸಲಾಗಿದೆ.
ಈ ಸಂದರ್ಭದಲ್ಲಿ ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮೂಡ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಕಲಬುರಗಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ವಿಧಾನ ಪರಿಷತ್ತಿನ ಶಾಸಕ ತಿಪ್ಪಣಪ್ಪ ಕಮಕನೂರ, ಡಿಸಿಪಿ ಕಿಶೋರ ಬಾಬು, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಮಹಾನಗರ ಪಾಲಿಕೆಯ ಆಯುಕ್ತ ರಾಹುಲ ಪಾಂಡ್ವೆ, ಸುಭಾಷ ಗುತ್ತೇದಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ವಾನತಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.