ಮಂಗಳೂರು, ಜ 06 (Daijiworld News/MSP): ನರೇಂದ್ರ ಮೋದಿಯವರು ಎರಡನೇ ಭಾರಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ ಭಾರತದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹೆಚ್.ಡಿ.ಕೆ " ಅಮೇರಿಕಾ ಮತ್ತು ಭಾರತದ ಪರಿಸ್ಥಿತಿ ಒಂದೇ ತರನಾಗಿದೆ. ಭಾರತ ಮಾತ್ರವಲ್ಲ ಪ್ರಪಂಚದಲ್ಲೇ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಅಮೇರಿಕ ಮತ್ತು ಭಾರತದ ನಾಯಕರು ಒಂದೇ ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ನಮ್ಮ ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಬಿಗಡಾಯಿಸಿದ್ದು, ಉಳ್ಳವರು ಬಂಡವಾಳ ಹೂಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ" ಎಂದು ಆರೋಪಿಸಿದರು.
ಇನ್ನು ಭಾರತದಲ್ಲಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದ ಬಳಿಕ ದೇಶದ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಅರಾಜಕತೆ ಸೃಷ್ಟಿಯಾಗಿದೆ ದೇಶದಲ್ಲಿನ ಸದ್ಯದ ಪರಿಸ್ಥಿತಿ ಗಮನಿಸಿದ್ರೆ ನನಗೂ ಆತಂಕವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯ ಈಗಾಗಲೇ ಪ್ರವಾಹ ಪೀಡಿತ ಪರಿಸ್ಥಿತಿಯಿಂದ ಕಂಗೆಟ್ಟಿದ್ದು, ಈ ಹಿನ್ನಲೆಯಲ್ಲಿ ವಿವಾದಾತ್ಮಕ ಸಿಎಎ ಕಾಯ್ದೆಯನ್ನು ರಾಜ್ಯದಲ್ಲಿ ಈಗಲೇ ಜಾರಿ ಬೇಡ , ಕನಿಷ್ಟ ಆರು ತಿಂಗಳಾದರೂ ಮುಂದೂಡಿ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.