ನವದೆಹಲಿ, ಜ 15 (Daijiworld News/MSP): ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷದೊಳಗೆ ಜಿದ್ದಾಜಿದ್ದಿ ಮುಂದುವರಿದಿದ್ದು, ಬುಧವಾರ ಕಾಂಗ್ರೆಸ್ ಪಕ್ಷದ ವರಿಷ್ಟ ರಾಹುಲ್ ಗಾಂಧಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ದೆಹಲಿಯಲ್ಲಿರುವ ಸಿದ್ದರಾಮಯ್ಯ ಮಂಗಳವಾರವಷ್ಟೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಎಂ.ಬಿ.ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರು ತಮ್ಮ ಆಪ್ತರನ್ನು ದೆಹಲಿಗೆ ಕರೆದುಕೊಂಡು ಬಂದಿರುವುದಕ್ಕೆ ಸೋನಿಯಾ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದ್ದು ಗುಂಪುಗಾರಿಕೆಗೆ ಅವಕಾಶವಿಲ್ಲ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಇಂದು ರಾಹುಲ್ ಗಾಂಧಿ ಅವರನ್ನೂ ಭೇಟಿಯಾಗಿ ಸಿದ್ದರಾಮಯ್ಯ ಎಂ.ಬಿ.ಪಾಟೀಲ್ ಪರ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇವರಿಬ್ಬರ ಮಾತುಕತೆಯ ಬಳಿಕವೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಮರ್ಥರ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪಕ್ಷ ಸಂಘಟನೆ ಹಾಗೂ ಹೊಂದಾಣಿಕೆ ಮಾಡಿಕೊಂಡು ಹೋಗುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಬದಲಾಗಿ ಎಂ.ಬಿ.ಪಾಟೀಲ್ ಅವರನ್ನು ಆಯ್ಕೆ ಮಾಡುವುದು ಸೂಕ್ತ. ಡಿಕೆಶಿ ವಿರುದ್ಧ ಇಡಿಯಲ್ಲಿ ಪ್ರಕರಣವಿದೆ. ಹೀಗಾಗಿ ಇದು ಮುಂದಿನ ದಿನಗಳಲ್ಲಿ ಸಮಸ್ಯೆಗೆ ಕಾರಣವಾಗಬಹುದು. ಲಿಂಗಾಯತ ಸಮುದಾಯದ ಎಂ.ಬಿ.ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಿದರೆ ಉತ್ತಮ ಎಂದು ಸಿದ್ದರಾಮಯ್ಯ ಹೈಕಮಾಂಡ್ ಮುಂದಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಹೀಗಾಗಿ ಕೆಪಿಸಿಸಿ ಪಟ್ಟ ಅಧ್ಯಕ್ಷಗಾದಿ ಸಿದ್ದರಾಮಯ್ಯ ಗುಂಪು ಅಥವಾ ವಿರೋಧಿ ಬಣದ ನಾಯಕರ ಪಾಲಾಗುತ್ತದೆಯೋ ಎನ್ನುವುದು ಕಾದು ನೋಡಬೇಕಾಗಿದೆ.