ನವದೆಹಲಿ, ಜ.17 (Daijiworld News/PY) : ನಿರ್ಭಯಾ ಹತ್ಯೆ ಪ್ರಕರಣ ಅಪರಾಧಿಯಲ್ಲೊಬ್ಭನಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು, ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿರುವುದಾಗಿ ವರದಿ ತಿಳಿಸಿದೆ.
ನಿರ್ಭಯಾ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಈ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್ ಸಿಂಗ್ ಎಂಬಾತ ಮರಣದಂಡನೆ ಶಿಕ್ಷೆಯಿಂದ ವಿನಾಯಿತಿ ನೀಡುವಂತೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದ. ದೆಹಲಿ ಸರ್ಕಾರ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಜ.16ರಂದು ಮಧ್ಯಾಹ್ನ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದು, ಜ.16 ಗುರುವಾರ ಸಂಜೆಯೇ ರಾಷ್ಟ್ರಪತಿಯವರಿಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.
ದೆಹಲಿ ಸರ್ಕಾರವು ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡುವಂತೆ ಜ.15ರಂದು ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು.
ನಿರ್ಭಯಾ ಪ್ರಕರಣದ ಅಪರಾಧಿ ಮುಕೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಮೊದಲು ದೆಹಲಿ ಸರ್ಕಾರ ವಜಾಗೊಳಿಸಿ ಬಳಿಕ ಲೆಫ್ಟಿನೆಂಟ್ ಗವರ್ನರ್ಗೆ ಕಳುಹಿಸಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು. ಲೆಫ್ಟಿನೆಂಟ್ ಗವರ್ನರ್ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಿದ್ದು, ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿರುವುದಾಗಿ ವರದಿ ತಿಳಿಸಿದೆ.