ಬೆಂಗಳೂರು, ಜ 21 (Daijiworld News/MB) : ಕೆಪಿಸಿಸಿ ಹುದ್ದೆ ವಿಭಜನೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿರೋಧ ಮಾಡಿದ ಹಿನ್ನಲೆಯಲ್ಲಿ ಸಿದ್ಧರಾಮಯ್ಯ ಅವರ ವಿರುದ್ಧ ಹಿರಿಯ ನಾಯಕರಾದ ಪರಮೇಶ್ವರ್, ಡಿ.ಕೆ.ಶಿವಕುಮಾರ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು ಇದೀಗ ಸಿದ್ದರಾಮಯ್ಯ ವಿರುದ್ಧ ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆಯೇ ಪ್ರತಿಭಟನೆ ಮಾಡಿದ್ದಾರೆ.
ಪರಮೇಶ್ವರ್ ಅವರು ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕ ಎರಡು ಹುದ್ದೆಗಳು ಪ್ರತ್ಯೇಕವಾಗಬೇಕೆಂದು ಹೇಳಿದ್ದು ಇದನ್ನು ಸಿದ್ಧರಾಮಯ್ಯ ಅವರು ವಿರೋಧ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧವೆ ಅವರ ಪಕ್ಷದವರೇ ಬೀದಿಗಳಿದಿದ್ದಾರೆ.
ಇಷ್ಟರವರೆಗೂ ತೆರೆಮರೆಯಲ್ಲಿ ಸ್ಥಾನಕ್ಕಾಗಿ ನಡೆಯುತ್ತಿದ್ದ ವಾಗ್ವಾದ ಈಗ ಬಹಿರಂಗವಾಗಿಯೇ ಆರಂಭವಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದ ಕೂಡಲೇ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವಂತೆ ಸಿದ್ದರಾಮಯ್ಯ ಅವರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ತಾವು ಗುಂಪು ಕಟ್ಟಿಕೊಂಡು ಹೈಕಮಾಂಡ್ ಮುಂದೆ ಹೋಗುವುದಿಲ್ಲ ಎಂದು ಸಿದ್ಧರಾಮಯ್ಯ ಅವರಿಗೆ ವ್ಯಂಗ್ಯ ಮಾಡಿದ್ದಾರೆ.
ಸಿದ್ದರಾಮಯ್ಯ ಬಣ ಹಾಗೂ ಮೂಲ ಕಾಂಗ್ರೆಸ್ ನಾಯಕರ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿ ನಡೆಯುತ್ತಿರುವ ವಾಗ್ವಾದ ಈಗ ಬಹಿರಂಗವಾಗಿ ಆರಂಭವಾಗಿದ್ದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಬಲರಾಮ್ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಪಕ್ಷದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಲರಾಮ್, ಮಂಜುನಾಥ ಹಾಗೂ ಕೆಂಚೇಗೌಡ ಮೂಲ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಎನ್ಎಸ್ಯುಐನಿಂದಲೂ ಕಾಂಗ್ರೆಸ್ನಲ್ಲಿ ವಿವಿಧ ಹಂತದಲ್ಲಿ ಪಕ್ಷದ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.