ಬೆಂಗಳೂರು, ಜ 24 (Daijiworld News/MB) : ಈ ಬಾರಿಯ ಗಣರಾಜ್ಯೋತ್ಸವಕ್ಕೆ ನಗರದ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಭಿಗಿ ಭದ್ರತೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಮಾಣೆಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ನಡೆಸಲಾಗಿದ್ದು 70 ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹಾಗೆಯೇ ಮೈದಾನದ ಹತ್ತಿರದಲ್ಲಿರುವ ಎತ್ತರದ ಕಟ್ಟಡಗಳು, ಕಾಮಗಾರಿ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ಮೂಲಕ ಆಯಾ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ, ಹೋಟೆಲ್ಗಳು ಸೇರಿದಂತೆ ಎಲ್ಲೆಡೆಯೂ ಪರಿಶೀಲನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ತಿಳಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮೈದಾನದಲ್ಲಿ ಎಂಟು ಡಿಸಿಪಿಗಳ ಸೇರಿದಂತೆ 1,200 ಮಂದಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದ್ದು 70ಕ್ಕೂ ಹೆಚ್ಚು ಸಿಸಿ ಟಿವಿಗಳು ಮಾತ್ರವಲ್ಲದೇ ನಾಲ್ಕು ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಲಾಗಿದೆ.
ಮೈದಾನದ ನಾಲ್ಕೂ ದ್ವಾರಗಳಲ್ಲೂ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ. ಮೈದಾನದ ಒಳ ಭಾಗದಲ್ಲಿ ಅಥವಾ ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಸಿಬ್ಬಂದಿಗೆ ತಿಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಹಾಗೆಯೇ ಈ ಕಾರ್ಯಕ್ರಮದ ತಯಾರಿ ಬಿರುಸಾಗಿ ನಡೆಯುತ್ತಿದ್ದು ಕಳೆದ ಒಂದು ವಾರದಿಂದ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ತಾಲೀಮು ನಡೆಯುತ್ತಿದೆ.
ಮೈದಾನದ ಒಂದೆಡೆ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ ಮಾಡಲಾಗುತ್ತಿದ್ದು ಇನ್ನೊಂದೆಡೆ ಕೆಎಸ್ಆರ್ಪಿ, ಸ್ಕೌಟ್ಸ್-ಗೈಡ್ಸ್, ಎನ್ಸಿಸಿ, ಸೇವಾದಳ, ವಿವಿಧ ಶಾಲಾ ಮಕ್ಕಳನ್ನು ಸೇರಿ 1,750 ಮಂದಿಯ 44 ತುಕಡಿಗಳು ಪಥಸಂಚಲನ ತಾಲೀಮು ನಡೆಸುತ್ತಿದ್ದಾರೆ.
ಶುಕ್ರವಾರ ಬಿಬಿಎಂಪಿ ಆಯುಕ್ತರು, ನಗರ ಪೊಲೀಸ್ ಆಯುಕ್ತರು ಹಾಗೂ ನಗರ ಜಿಲ್ಲಾಧಿಕಾರಿಗಳನ್ನು ಸೇರಿಂದತೆ ಸೇನಾ ಪಡೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ 44 ತುಕಡಿಗಳಿಂದ ಪಥಸಂಚಲನ ಹಾಗೂ ಕಿಕ್ಕೇರಿ ಕೃಷ್ಣಮೂರ್ತಿ ದೊಡ್ಡವಾಡ ತಂಡದಿಂದ ನಾಡಗೀತೆ ಮತ್ತು ರೈತಗೀತೆಯ ಅಂತಿಮ ಹಂತದ ತಾಲೀಮು ನಡೆಸಲಾಗಿದೆ.