ಬೆಂಗಳೂರು, ಜ.24 (Daijiworld News/PY) : "ಸಚಿವ ಸಂಪುಟ ವಿಸ್ತರಣೆಯನ್ನು ಮೂರು ದಿನಗಳಲ್ಲಿ ಮಾಡಲಾಗುವುದು, ಕರ್ನಾಟಕ ವಿಧಾನಸಭೆ ಉಪಚುನಾವಣೆಯಲ್ಲಿ ಗೆದ್ದವರಿಗೆ ಮಾತ್ರ ಮಂತ್ರಿಸ್ಥಾನ ನೀಡಲಾಗುವುದು. ಆದರೆ, ಸೋತವರಿಗೆ ಸಚಿವ ಸ್ಥಾನವಿಲ್ಲ" ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶುಕ್ರವಾರ ದಾವೋಸ್ನಿಂದ ಬೆಂಗಳೂರಿಗೆ ಬಂದಿಳಿದ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ ಬಿಎಸ್ವೈ, "ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು, ಜ.25 ಶನಿವಾರ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಅವರೊಂದಿಗೆ ಚರ್ಚಿಸಿದ ನಂತರವೇ ಸಚಿವ ಸಂಪುಟ ವಿಸ್ತರಣೆಯ ಅಂತಿಮ ಪಟ್ಟಿಯನ್ನು ಸಿದ್ದಪಡಿಸಲಾಗುವುದು. ಕರ್ನಾಟಕ ವಿಧಾನಸಭೆ ಉಪಚುನಾವಣೆಯಲ್ಲಿ ಗೆದ್ದವರಿಗೆ ಮಾತ್ರ ಮಂತ್ರಿಸ್ಥಾನ ನೀಡಲಾಗುವುದು. ಆದರೆ, ಸೋತವರಿಗೆ ಸಚಿವ ಸ್ಥಾನ ನೀಡುವುದಿಲ್ಲ" ಎಂದು ಹೇಳಿದ್ದಾರೆ.
ಸಿಎಂ ಬಿಎಸ್ವೈ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ತಡವಾಗುತ್ತಲೇ ಇದೆ. ಈಗಾಗಲೇ ಸಿಎಂ ಬಿಎಸ್ವೈ ಅವರನ್ನು ನೂತನ ಶಾಸಕರು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂದು ನೂತನ ಶಾಸಕರು ಸಿಎಂ ಬಿಎಸ್ವೈ ಅವರಿಗೆ ಹೇಳಿದ್ದಾರೆ.
ಜ.25 ಶನಿವಾರ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಹಲವು ದಿನಗಳಿಂದ ವಿಳಂಬವಾಗುತ್ತಿದ್ದ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು ಈ ನಡುವೆ ನೂತನ ಶಾಸಕರಿಂದ ಒತ್ತಡ ಹೆಚ್ಚುತ್ತಿದ್ದು, ಇನ್ನು 3 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.