ಬೆಂಗಳೂರು, ಜ 25 (Dajiworld News/MB) : "ದಾವೋಸ್ನಲ್ಲಿ ಹಲವು ಉದ್ಯಮಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದ್ದು, ಹೂಡಿಕೆಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಭೂ ಖರೀದಿ ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ಮಾಡಿ ಸರಳ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, "ದಾವೋಸ್ನಲ್ಲಿ ಹಲವಾರು ಉದ್ಯಮಿಗಳು ಕರ್ನಾಟಕದಲ್ಲಿ ಭೂಮಿ ಖರೀದಿ ಮಾಡಲು ಹಲವು ಅಡೆತಡೆಗಳು ಇದೆ ಎಂದು ಹೇಳಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕೃಷಿ ಭೂಮಿ ಪರಿವರ್ತನೆ ಹಾಗೂ ಕೃಷಿ ಭೂಮಿ ಖರೀದಿಗೆ ಸಂಬಂಧಪಟ್ಟಂತೆ ಕಾನೂನಿನಲ್ಲಿ ಕೆಲವು ತಿದ್ದುಪಡಿ ಮಾಡಲಾಗುವುದು" ಎಂದರು.
ಹಾಗೆಯೇ ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಭೇಟಿ ಹಾಗೂ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಣೆ ಮಾಡಿದರು.