ನವದೆಹಲಿ, ಜ 27 (Daijiworld News/MB) : ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.
ಯಾರನ್ನಾದರೂ ಗಲ್ಲಿಗೇರಿಸಲಾಗುತ್ತದೆ ಎಂಬ ವಿಷಯವಿರುವಾಗ ಅದಕ್ಕಿಂತ ತುರ್ತಾದ ವಿಚಾರ ಬೇರೆಯಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ನ್ಯಾಯಪೀಠ ಹೇಳಿದೆ.
ಮುಕೇಶ್ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಜನವರಿ 17ರಂದು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಜನವರಿ 25ರಂದು ಮುಕೇಶ್ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ
ದೆಹಲಿಯ ಪಟಿಯಾಲಹೌಸ್ ನ್ಯಾಯಾಲಯ ಇತ್ತೀಚೆಗೆ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಫೆಬ್ರವರಿ 1ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ವಾರಂಟ್ ಜಾರಿ ಮಾಡಿತ್ತು.