ಬೆಂಗಳೂರು, ಜ.29 (Daijiworld News/PY) : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ 2019 ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆಯಾದ ಹಿಂಸಾಚಾರವನ್ನು ನಿಯಂತ್ರಿಸಲು ಪೊಲೀಸರು ನಡೆಸಿದ ಗೋಲಿಬಾರ್ ವಿಚಾರವಾಗಿ ತನಿಖೆ ನಡೆಸಲು ಎಸ್ಐಟಿ ರಚಿಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನೋಟೀಸ್ ಜಾರಿಗೊಳಿಸಿದೆ.
ಸ್ವಾತಂತ್ಯ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ ಹಾಗೂ ಮತ್ತಿತರರು ಸಲ್ಲಿಸಿರುವ ಪಿಎಎಲ್ನ ವಿಚಾರಣೆ ಸಂದರ್ಭ ವಾದವನ್ನು ಆಲಿಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟೀಸ್ ಜಾರಿಗೊಳಿಸಿ ಫೆ.4ರ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿತು.
ಇದರ ಜೊತೆಗೆ ಘಟನೆ ನಡೆದ ಸಂದರ್ಭದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ಇಡುವಂತೆ ನ್ಯಾಯಪೀಠ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಸಲ್ಲಿಸಲಾಗಿರುವ ಮತ್ತೊಂದು ಅರ್ಜಿಯ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆ ಮಾಡಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.