ಬೆಂಗಳೂರು, ಫೆ 04 (DaijiworldNews/SM): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿಸೆಂಬರ್ 19ರಂದು ಮಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಗೋಲಿಬಾರ್ ಕುರಿತಂತೆ ಸಲ್ಲಿಕೆಯಾಗಿರುವ ದೂರುಗಳು ಬಳಿಕ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಂಗಳೂರಿನ ಗೋಲಿಬಾರ್ ವಿಚಾರದ ಬಗ್ಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಅಲ್ಲದೆ, ಗೋಲಿಬಾರ್ ನಡೆದ ಸಂದರ್ಭದ ಸಿಸಿಟಿವಿಗಳಲ್ಲಿ ದಾಖಲಾಗಿರುವ ವೀಡಿಯೋಗಳು, ಸಾರ್ವಜನಿಕರು ಮತ್ತು ಪೊಲೀಸರು ಚಿತ್ರೀಕರಿಸಿರುವ ವಿಡಿಯೋಗಳನ್ನು ಸಂರಕ್ಷಿಸಿಡಬೇಕು. ಅಲ್ಲದೆ ಆ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿಯನ್ನು ಕೂಡ ನೀಡಬೇಕು. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿಗಳು ಸಾರ್ವಜನಿಕ ಪ್ರಕಟನೆ ಹೊರಡಿಸಬೇಕೆಂದು ನ್ಯಾಯಪೀಠ ಆದೇಶ ಹೊರಡಿಸಿದೆ.
ಇನ್ನು ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಗಳನ್ನು ದೂರುಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸುತ್ತಿದ್ದಾರೆ ಎಂಬ ಆರೋಪವಿದ್ದು ಇದನ್ನು ಅರ್ಜಿದಾರರು ಉಲ್ಲೇಖಿಸಿದ್ದರು. ಅಲ್ಲದೆ, ಪ್ರಕರಣದ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರ್ಟ್ ಗೆ ಮನವಿ ಮಾಡಿದ್ದರು.
ಈ ಹಿನ್ನೆಲೆ ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್ ಈ ಎಲ್ಲಾ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದೆ. ಹಾಗೂ ವರದಿ ನೀಡುವಂತೆ ಸರಕಾರಕ್ಕೆ ಸೂಚನೆ ನೀಡಿದೆ.