ಬೆಂಗಳೂರು, ಫೆ 6 (Daijiworld News/MSP): ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಉಪಚುನಾವಣೆಯಲ್ಲಿ ಗೆದ್ದ ಹತ್ತು ಮಂದಿ ಶಾಸಕರು ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ನೂತನ ಸಚಿವರಿಗೆ ರಾಜ್ಯಪಾಲ ವಜುಭಾಯಿ ವಾಲ ಪ್ರಮಾಣ ವಚನ ಭೋಧಿಸಿದರು. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್ ಸಿಂಗ್, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ, ಚಿಕ್ಕಬಳ್ಳಾಪುರ ಶಾಸಕ ಡಾ| ಕೆ. ಸುಧಾಕರ್, ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಅವರು ಬಿಎಸ್ ವೈ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕಾಂಗ್ರೆಸ್–ಜೆಡಿಎಸ್ನಿಂದ ಬಂಡೆದ್ದು ಬಿಜೆಪಿಗೆ ವಲಸೆ ಬಂದ ಬಳಿಕ ಉಪಚುನಾವಣೆಯಲ್ಲಿ ಗೆದ್ದು 'ಅರ್ಹ'ರಾದ 10 ಶಾಸಕರು ಸಚಿವರಾಗುತ್ತಿದ್ದಾರೆ. ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ.