ನವದೆಹಲಿ, ಫೆ 6 (DaijiworldNews/SM): ದೆಹಲಿ ವಿಧಾನಸಭೆ ಚುನಾವಣೆ ಗರಿಗೆದರಿದ್ದು, ಪ್ರಮುಖ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ನಡುವೆ ಇದೀಗ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಿ ರಾಜಧಾನಿಯ ಗದ್ದುಗೆಯನ್ನೇರಬೇಕೆನ್ನುವ ಹಂಬಲವನ್ನು ಬಿಜೆಪಿ ಹೊಂದಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ದೆಹಲಿಯಲ್ಲಿ ನಾವು ಅಧಿಕಾರ ಸ್ವೀಕಾರ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ ಅವರು, 45 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ದೆಹಲಿಯ ಜನತೆಯೊಂದಿಗೆ ಬೆರೆಯಲು ಇದೊಂದು ಉತ್ತಮ ಅವಕಾಶವಾಗಿದೆ. ದೆಹಲಿಯ ಜನತೆ ಅಭಿವೃದ್ಧಿಯನ್ನು ಬಯಸುತ್ತಿದ್ದಾರೆ. ಸುಳ್ಳು ಭರವಸೆ, ಅಸಮಾಧಾನ ಮತ್ತು ಅರಾಜಕತೆಯಿಂದ ರೋಸಿ ಹೋಗಿದ್ದಾರೆ. ಹೀಗಾಗಿ ದೆಹಲಿಯ ಜನತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ನಿರ್ಧಾರಿಸಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.