ನವದೆಹಲಿ, ಫೆ.17 (DaijiworldNews/PY): ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಗಳಿಗೆ ಅನುಗುಣವಾಗಿ ಕಾಶ್ಮೀರ ಸಮಸ್ಯೆ ಪರಿಹರಿಸುವ ಬಗ್ಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಮುಂದಿಟ್ಟಿರುವ ಪ್ರಸ್ತಾವವನ್ನು ಭಾರತ ತಿರಸ್ಕರಿಸಿದ್ದು, ಕಾಶ್ಮೀರಕ್ಕೆ ವಿಚಾರದಲ್ಲಿ ಮೂರನೇ ವ್ಯಕ್ತಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ತನ್ನ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದೆ.
ಫೆ.16 ಭಾನುವಾರದಂದು ಗುಟೆರಸ್ ಅವರು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಜೊತೆ ಮಾತುಕತೆ ನಡೆಸಿದ್ದರು. ಈ ಸಂದರ್ಭ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಗಳ ವಿಚಾರವಾಗಿ ಚರ್ಚೆಯಾಗಿದೆ. ನಂತರ ಕಾಶ್ಮೀರಕ್ಕೆ ಸಂಬಂಧಿಸಿ ಭಾರತ-ಪಾಕಿಸ್ತಾನ ನಡುವೆ ಇರುವ ಸಮಸ್ಯೆ ಪರಿಹರಿಸುವ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗುಟೆರಸ್ ಉತ್ತರಿಸಿದ್ದು, ಮಾತುಕತೆಯ ಪ್ರಸ್ತಾವ ಮುಂದಿಟ್ಟಿದ್ದಾರೆ. ಜಮ್ಮು-ಕಾಶ್ಮೀರ ಹಾಗೂ ಭಾರತ-ಪಾಕಿಸ್ತಾನ ನಡುವಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿನ (ಎಲ್ಒಸಿ) ಪರಿಸ್ಥಿತಿ ಬಗ್ಗೆ ಕಾಳಜಿ ಹೊಂದಿದ್ದೇವೆ. ಉಭಯ ರಾಷ್ಟ್ರಗಳು ಗರಿಷ್ಠ ಸಂಯಮ ವಹಿಸಬೇಕು ಎಂದು ತಿಳಿಸಿದ್ದಾರೆ.
ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಭಾರತ, ಕಾಶ್ಮೀರ ವಿಚಾರದಲ್ಲಿ ಮೂರನೇ ವ್ಯಕ್ತಿ ಹಸ್ತಕ್ಷೇಪ ಮಾಡುವ ಅವಶ್ಯಕತೆಯಿಲ್ಲ ಎಂಬ ತನ್ನ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದಿದೆ. ಜೊತೆಗೆ ಪಾಕಿಸ್ತಾನವು ಜಮ್ಮು-ಕಾಶ್ಮೀರದಲ್ಲಿ ಭಾರತದ ಭೂಪ್ರದೇಶವನ್ನು ಅಕ್ರಮವಾಗಿ ಅತಿಕ್ರಮಿಸಿಕೊಳ್ಳುತ್ತಿರುವ ವಿಚಾರವಾಗಿ ಗಮನಹರಿಸಬೇಕಿದೆ ಎಂದು ಹೇಳಿದೆ.