ರಾಮನಗರ, ಫೆ.21 (DaijiworldNews/PY): ಸಿಎಎ ವಿರುದ್ಧದ ಪ್ರತಿಭಟನಾ ಸಭೆಯಲ್ಲಿ ಅಮೂಲ್ಯ ಎಂಬ ಯುವತಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿರುವುದು ಖಂಡನೀಯ. ಇಂತಹ ದೇಶದ್ರೋಹದ ಕೆಲಸ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕುಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ರಾಮನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಆಕೆ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾಳೋ ಇಲ್ಲ ಪ್ರಚಾರಕ್ಕಾಗಿ ಮಾಡಿದ್ದಾಳೋ, ಆಕೆಗೆ ಈ ವಿಚಾರವಾಗಿ ತಿಳುವಳಿಕೆ ಇದೆಯೋ ಇಲ್ಲವೋ ತಿಳಿದಿಲ್ಲ. ಇಂತಹ ದೇಶದ್ರೋಹದ ಕೆಲಸ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ನಮ್ಮ ಪಕ್ಷದ ಕಾರ್ಯಕರ್ತರಾದ ಇಮ್ರಾನ್ ಸಹ ಕಾರ್ಯಕ್ರಮದ ಸಂಘಟನೆ ಹೊಣೆ ಹೊತ್ತಿದ್ದರು. ಯುವತಿ ಘೋಷಣೆ ಕೂಗಿದ ಕೂಡಲೇ ಆಕೆಯ ಮೈಕ್ ಕಸಿದುಕೊಂಡಿದ್ದಾರೆ. ಹೀಗಾಗಿ ಸಂಘಟಕರಿಂದ ಆ ರೀತಿಯ ಪ್ರಯತ್ನ ಆಗಿಲ್ಲ ಎಂಬುದು ತಿಳಿದಿದೆ. ಮೊದಲು ನಾನು ಭಾರತೀಯ ಎಂಬ ಭಾವನೆ ಇದ್ದಾಗ ಮಾತ್ರ ಹೋರಾಟಕ್ಕೆ ಇತರರು ಕೈಜೋಡಿಸುತ್ತಾರೆ. ಈ ರೀತಿಯ ಅಪಪ್ರಚಾರ ಯಾರಿಗೂ ಬೇಡ ಎಂದು ಹೇಳಿದರು.
ಸಿಎಎ ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಎಂಬ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಈ ರೀತಿಯ ಪ್ರಯತ್ನಗಳಿಗೆ ಹೆಚ್ಚು ಪ್ರಚಾರ ಮಾಡುವ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಮುಂದಾಗಿದೆ. ದೇಶಭಕ್ತಿಯ ಬಗ್ಗೆ ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ. ಹೋರಾಟಗಾರರು ತ್ರಿವರ್ಣ ಧ್ವಜ ಹಿಡಿದು ಹೋರಾಟ ನಡೆಸಿದ್ದಾರೆಯೇ ಹೊರತು ಪಾಕಿಸ್ತಾನದ ಧ್ವಜವನ್ನಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಹಾರಿದ್ದ ರಾಷ್ಟ್ರಧ್ವಜಕ್ಕಿಂತ ಹತ್ತು ಪಟ್ಟು ಧ್ವಜಗಳು ಇಂದು ಹೋರಾಟದ ಹೆಸರಿನಲ್ಲಿ ಹಾರುತ್ತಿವೆ. ಸಂವಿಧಾನ ನೀಡಿದ ಹಕ್ಕನ್ನು, ಸಂವಿಧಾನದ ಆಶಯಗಳು ಹಾಗೂ ದೇಶವನ್ನು ಯಾರಿಂದಲೂ ಛಿದ್ರಗೊಳಿಸಲು ಸಾಧ್ಯವಿಲ್ಲ. ಯಾರೋ ಒಬ್ಬರು ತಿಳಿಗೇಡಿ ಘೋಷಣೆ ಕೂಗಿದ ಮಾತ್ರಕ್ಕೆ ಅದರ ಗಮನವನ್ನು ಬೇರೆ ಕಡೆಗೆ ಸೆಳೆಯುವ ಅಗತ್ಯವಿಲ್ಲ ಎಂದು ಹೇಳಿದರು.