ಶಿವಮೊಗ್ಗ, ಫೆ.24 (DaijiworldNews/PY) : "ಶಿವಮೊಗ್ಗ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸುವುದಕ್ಕೆ ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸಲಾಗುವುದು" ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ಶಿವಮೊಗ್ಗ ಎನ್ಇಎಸ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, "ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಎಲ್ಲಾ ಅಭಿವೃದ್ದಿ ಕಾಮಗಾರಿಗಳನ್ನು ಮುಂದಿನ ಮೂರುವರೆ ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. 220 ಕೋಟಿ.ರೂಗಳನ್ನು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಮಂಜೂರು ಮಾಡಲಾಗಿದೆ. ನಿರ್ಮಾಣದ ಕಾಮಗಾರಿಯು ಮುಂದಿನ 15 ದಿನಗಳಲ್ಲಿ ಪ್ರಾರಂಭವಾಗಲಿದೆ. ಕಾಮಗಾರಿ ಪೂರ್ಣಗೊಳಿಸಲು 8 ರಿಂದ 10 ತಿಂಗಳುಗಳು ಬೇಕಾಗುತ್ತದೆ. ಇಲ್ಲಿ ವಿಮಾನ ನಿಲ್ದಾಣದಿಂದಾಗಿ ಕೈಗಾರಿಕೆಗಳು ಅಧಿಕ ಸಂಖ್ಯೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ" ಎಂದು ತಿಳಿಸಿದರು.
"ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಬಂಡವಾಳ ಹೂಡುವ ಬಗ್ಗೆ ಈಗಾಗಲೇ 42 ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ವೈಯುಕ್ತಿಕವಾಗಿ ಮಾತುಕತೆ ನಡೆಸಿದ್ದೇನೆ. ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡಲಾಗುತ್ತಿದೆ. ಜಮೀನು, ಹಣಕಾಸು ನೆರವು ಸೇರಿದಂತೆ ಎಲ್ಲಾ ಉತ್ತೇಜನಗಳನ್ನು ಬೇರೆ ಕೇಂದ್ರಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸುವವರಿಗೆ ನೀಡಲಾಗುವುದು. ರಾಜ್ಯದ ಅಭಿವೃದ್ದಿ ಹೊಂದಲು ಕೃಷಿ ಹಾಗೂ ಕೈಗಾರಿಕೆ ಸರಿ ಸಮಾನವಾಗಿ ಬೆಳೆಯದೆ ಸಾಧ್ಯವಿಲ್ಲ. ಹಾಗಾಗಿ ಈ ಎರಡೂ ಕ್ಷೇತ್ರಗಳಲ್ಲಿ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡಲಾಗುವುದು" ಎಂದು ಹೇಳಿದರು.
"ಸರ್ಕಾರ ಬ್ಯಾಂಕ್ಗಳಿಂದ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಹಣಕಾಸು ನೆರವು, ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡಿದೆ. ಯುವ ಜನತೆ ಸ್ವಯಂ ಉದ್ಯೋಗ ಕೈಗೊಳ್ಳಲು ಮುಂದೆ ಬರಬೇಕು" ಎಂದರು.
"ಯುವ ಜನರಿಗೆ ಉದ್ಯೋಗ ಕಲ್ಪಿಸಿ ಕೊಡುವ ಸಲುವಾಗಿ 2009ರಲ್ಲಿ ರಾಜ್ಯದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿತ್ತು. ಮುಂದಿನ ದಿನಗಳಲ್ಲಿ ನಿರಂತರವಾಗಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು. ಶಿವಮೊಗ್ಗದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 150ಕ್ಕೂ ಹೆಚ್ಚಿನ ಕಂಪೆನಿಗಳು ಪಾಲ್ಗೊಂಡಿದ್ದು, ಸ್ಥಳದಲ್ಲಿಯೇ ಉದ್ಯೋಗ ಪಡೆದುಕೊಳ್ಳುವ ಅವಕಾಶವಿದೆ. ಇದುವರೆಗೆ ಜಿಲ್ಲೆಯಲ್ಲಿ ನಡೆದ ಉದ್ಯೋಗ ಮೇಳಗಳಲ್ಲಿ ಒಟ್ಟು 11500 ಮಂದಿಗೆ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ. ಜಿಲ್ಲೆಯಲ್ಲಿ 45 ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಲಾಗಿದ್ದು, 2651 ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ. 3609 ಮಂದಿಗೆ ದೀನ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಪೂರ್ಣ ತರಬೇತಿ ನೀಡಲಾಗಿದ್ದು, 2600 ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ" ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, "ಶೇ.4ರ ಬಡ್ಡಿದರದಲ್ಲಿ 10 ಕೋಟಿ ರೂ.ವರೆಗೆ ಸಾಲದ ಸೌಲಭ್ಯವನ್ನು ಉದ್ಯೋಗ ಆರಂಭಿಸುವ ಪ.ಜಾತಿ ಹಾಗೂ ಪಂಗಡದ ಉದ್ಯಮಿಗಳಿಗೆ ನೀಡಲಾಗುತ್ತದೆ" ಎಂದು ಹೇಳಿದರು.
ಬಳಿಕ ಜಿಲ್ಲಾಧಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ಶಾಸಕರಾದ ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ರುದ್ರೇಗೌಡ, ಬಿ.ವೈ ರಾಘವೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.