ನವದೆಹಲಿ, ಫೆ 25 (DaijiworldNews/SM): ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಹಿಂಸಾಚಾರದ ಬಗ್ಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ. ಹುಚ್ಚಾಟವನ್ನು ಕೈ ಬಿಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯವು ಸಕಾರಾತ್ಮಕವಾಗಿ ಸ್ಪಂದಿಸಿದೆ. ದೆಹಲಿಯಲ್ಲಿ ಶಾಂತಿ ಸ್ಥಾಪಿಸುವುದು ಎಲ್ಲರಿಗೂ ಬೇಕಾಗಿದ್ದು, ಈ ನಿಟ್ಟಿನಲ್ಲಿ ತುರ್ತುಸಭೆಯನ್ನು ಕರೆದು ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡೆಸಿದ ತುರ್ತುಸಭೆಯಲ್ಲಿ ತಕ್ಷಣ ಕೈಗೊಳ್ಳಬಹುದಾದ ಕ್ರಮದ ಬಗ್ಗೆ ಚರ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾದುವ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದಕ್ಕಾಗಿ ಅಗತ್ಯವೆನಿಸಿದ ಕಡೆಯಲ್ಲಿ ಭದ್ರತೆ ಒದಗಿಸಲು ಗೃಹ ಸಚಿವಾಲಯ ಸಮ್ಮತಿಸಿದೆ. ಇನ್ನು ದೆಹಲಿಯಲ್ಲಿ ಉನ್ನತ ಅಧಿಕಾರಿಗಳ ಸೂಚನೆ ಬರುವ ತನಕ ಪೊಲೀಸರು ಏನು ಮಾಡಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಗೃಹ ಸಚಿವರ ಗಮನಕ್ಕೆ ತರಲಾಗಿದೆ ಎಂದು ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.