ಬೆಂಗಳೂರು, ಫೆ 27 (Daijiworld News/MB) : ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ.19 ರಂದು ನಡೆದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಹಾಗೂ ಠಾಣೆಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಬಂಧನವಾಗಿದ್ದ 16 ಮಂದಿಗೆ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಸುಹೇಲ್ ಹಾಗೂ ತಂಝೀಲ್ ಸೇರಿದಂತೆ 16 ಆರೋಪಿಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಈ ಆರೋಪಿಗಳಿಗೆ ಜಾಮೀನು ನೀಡಲು ಮಂಗಳೂರು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿತ್ತು.
ಈ ಮೊದಲು ಈ ಪ್ರಕರಣಕ್ಕೆ ಸಂಬಂಧಿಸಿ 21 ಮಂದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.