ಭೋಪಾಲ್, ಮಾ. 06 (Daijiworld News/MB) : ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂಬ ಆರೋಪಗಳ ಬೆನ್ನಲ್ಲೇ ಮಧ್ಯಪ್ರದೇಶದ ಕಾಂಗ್ರೆಸ್ನ ಶಾಸಕ ಹರ್ದೀಪ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕದಲ್ಲಿರುವ ಹರ್ದೀಪ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಪ್ರಜಾಪತಿ ಅವರಿಗೆ ನೀಡಿದ್ದು, "ಜನರಿಂದ ಎರಡನೇ ಬಾರಿ ಆಯ್ಕೆಯಾದರೂ ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ. ಪ್ರತಿಯೊಬ್ಬ ಶಾಸಕರು ಭ್ರಷ್ಟಾಚಾರದ ಭಾಗವಾಗಿ ಕೆಲಸ ಮಾಡುತ್ತಿದ್ದಾರೆ" ಎಂದು ಈ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಈ ವಿಚಾರವಾಗಿ ಪತ್ರಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, "ಬಿಜೆಪಿಯು 14 ಶಾಸಕರನ್ನು ತನ್ನ ಕಡೆ ಸೆಳೆಯುವ ಯತ್ನ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರವು 15 ವರ್ಷಗಳಿಂದ ನಡೆಯುತ್ತಿದ್ದ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾಗಳನ್ನು ನಿಲ್ಲಿಸಿದೆ. ಈ ಹಿನ್ನಲೆಯಲ್ಲಿ ಸರ್ಕಾರವನ್ನು ಪತನ ಮಾಡಲು ಬಿಜೆಪಿ ಪಿತೂರಿ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಮಧ್ಯಪ್ರದೇಶ ಬಿಜೆಪಿ ಆಪರೇಷನ್ಗೆ ಒಳಗಾದ ಒಟ್ಟು 10 ಕಾಂಗ್ರೆಸ್ ಶಾಸಕರಲ್ಲಿ ಹರ್ದೀಪ್ ಸಿಂಗ್ ಕೂಡ ಒಬ್ಬರಾಗಿದ್ದಾರೆ. ಬಿಜೆಪಿಯು 12 ಮಂದಿ ಶಾಸಕರನ್ನು ಸೆಳೆದಿದ್ದು ಈಗಾಗಲೇ 8 ಮಂದಿ ಶಾಸಕರು ದೆಹಲಿಗೆ ಶಿಫ್ಟ್ ಆಗಿದ್ದಾರೆ. ಹಾಗೆಯೇ ಮಂಗಳವಾರ ರಾತ್ರೋರಾತ್ರಿ 4 ಮಂದಿ ಶಾಸಕರು ಕರ್ನಾಟಕಕ್ಕೆ ಶಿಫ್ಟ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.
ಬಿಜೆಪಿಯ ರಾಂಪಾಲ್ ಸಿಂಗ್, ನರೋತ್ತಮ್ ಮಿಶ್ರಾ, ಅರವಿಂದ ಬದೌರಿಯಾ ಮತ್ತು ಸಂಜಯ್ ಪಾಠಕ್ ಶಾಸಕರಿಗೆ ಹಣ ನೀಡಿದ್ದಾರೆ. ಈ ಎಲ್ಲಾ ಶಾಸಕರು ಕಾಂಗ್ರೆಸ್ಗೆ ಮರಳಲಿದ್ದಾರೆ ಎಂದು ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದರು.
ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಕಮಲನಾಥ್, "ನಮ್ಮ ಸರ್ಕಾರಕ್ಕೆ ಏನು ಆಗುವುದಿಲ್ಲ. ಎಲ್ಲಾ ಶಾಸಕರು ವಾಪಾಸ್ ಆಗುತ್ತಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್ಪಿ 2, ಎಸ್ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ.
2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಚಿಂದ್ವಾರಾ ಕ್ಷೇತ್ರದಿಂದ ಸಿಎಂ ಕಮಲ್ನಾಥ್ ಪುತ್ರ ನಕುಲ್ ನಾಥ್ ಜಯಗಳಿಸಿದ್ದರು.