ಬೆಂಗಳೂರು, ಮಾ 10 (Daijiworld News/MSP): ಬೆಂಗಳೂರಿನಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಲರ್ಟ್ ಆಗಿದ್ದು, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉನ್ನತಮಟ್ಟದ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಸಿಎಂ ರಾಜ್ಯದಲ್ಲಿ ನಾಲ್ವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ, ಇನ್ನು ಮುಂದಿನ ದಿನಗಳಲ್ಲಿ ಹೊರ ದೇಶಗಳಿಂದ ಬರುವ ಪ್ರಯಾಣಿಕರನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಪಾಸಣೆಗೆ ಒಳಪಡಿಸಲಾಗುವುದು ಎಂದಿದ್ದಾರೆ.
ಮಾಸ್ಕ್ಗಳಿಗೆ ದುಪ್ಪಟ್ಟು ಬೆಲೆ ಪಡೆಯುವ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ, ಈ ಬಗ್ಗೆ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ. ಮಾಸ್ಕ್ ನ್ನು ಹೆಚ್ಚಿನ ಬೆಲೆ ಮಾರಾಟ ಮಾಡಲು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದೇವೆ. ಅಗತ್ಯವಾಗಿರುವಷ್ಟು ಮಾಸ್ಕ್ಗಳನ್ನು ತರಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ಯಾವುದಕ್ಕೂ ಕೊರತೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಕೊರೊನಾ ವೈರಸ್ ಪತ್ತೆ ಹಚ್ಚುವ ಕೇಂದ್ರಗಳನ್ನು ಪರಿಶೀಲನೆ ಮಾಡಿದ್ದು, ಕೊರೊನಾ ವೈರಸ್ ಬಗ್ಗೆ ಯಾರೂ ಭಯ ಭೀತರಾಗುವುದು ಬೇಡ,ಈಗಾಗಲೇ ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ವಿತರಣೆ ಮಾಡುತ್ತಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ, ಜನೌಷಧಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.