ಹುಬ್ಬಳ್ಳಿ, ಮಾ 16 ( Daijiworld News/MSP): ಹಿರಿಯ ಪತ್ರಕರ್ತ, ಕನ್ನಡ ಹೋರಾಟಗಾರ, ನಾಡೋಜ ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಈ ಹಿನ್ನಲೆಯಲ್ಲಿ ಭಾನುವಾರ ಪಾಟೀಲ ಪುಟ್ಟಪ್ಪ ಅವರನ್ನು ಭಾನುವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಫೆ.10ರಿಂದ ಚಿಕಿತ್ಸೆ ಪಡೆಯುತ್ತಿರುವ ಪುಟ್ಟಪ್ಪ, ವಿಪರೀತ ಜ್ವರ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಆಯತಪ್ಪಿ ಬಿದ್ದ ಹಿನ್ನಲೆಯಲ್ಲಿ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಇದಲ್ಲದೆ ಕಿಡ್ನಿ ತೊಂದರೆ, ರಕ್ತ ಹೀನತೆ ಹಾಗೂ ಸೋಂಕು ಕಂಡುಬಂದಿದ್ದು, ಎಲ್ಲಾ ಕಾಯಿಲೆಗೂ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಬಳಿಕ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.
ಆಸ್ಪತ್ರೆಗೆ ಮುಖ್ಯಮಂತ್ರಿಗಳ ಸಹಿತ ಮಠಾಧೀಶರುಗಳಾದ ಇಳಕಲ್ಲು ಗುರು ಮಹಾಂತ ಶ್ರೀಗಳು, ಶ್ರೀ ಬಸವಲಿಂಗ ಸ್ವಾಮೀಜಿ, ಮೂರುಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಶ್ರೀಗಳು, ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮುಂತಾಡ ಗಣ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.